ರಾಯಚೂರು : ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ನಗರದ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವುದರ ಮೂಲಕ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು. ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವಲ್ಲಿ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ಮುಂದುವರಿಸಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅತಿಥಿ ಉಪನ್ಯಾಸಕರ ಸೇವೆಯನ್ನು ಪರಿಗಣಿಸಿ ಕಾಯಂಗೊಳಿಸುವಂತೆ ಆಗ್ರಹಿಸಿದರು. ಕಳೆದ 23 ದಿನಗಳಿಂದ ಅನಿರ್ಧಿಷ್ಟ ಧರಣಿ ನಡೆಸುತ್ತಿದ್ದರೂ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸುತ್ತಿಲ್ಲ ಎಂದು ಉಪನ್ಯಾಸಕರು ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಮಾನವ ಸರಪಳಿಯಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಬೆಳಗಾವಿ ಸುವರ್ಣಸೌಧ ಮುಂದೆ ಡಿ.7 ರಂದು ನಡೆದ ಪ್ರತಿಭಟನೆಯಲ್ಲಿ ಉಪನ್ಯಾಸಕರ ಬೇಡಿಕೆಗಳನ್ನು ಮತ್ತು ಸಮಸ್ಯೆಗಳನ್ನು ಆಲಿಸುವುದಾಗಿ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೂ ಯಾವುದೇ ರೀತಿಯ ಸ್ಪಂದನೆ ದೊರೆತಿಲ್ಲ ಎಂದರು. ಅತಿಥಿ ಉಪನ್ಯಾಸಕರು ಕಳೆದ 15 ವರ್ಷಗಳಿಂದ ತೀವ್ರ ಆರ್ಥಿಕ ತೊಂದರೆಗೆ ಗುರಿಯಾಗಿದ್ದಾರೆ. ಅತಿಥಿ ಉಪನ್ಯಾಸಕರ ಕಾಯಂಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು.


