ಕಲ್ಯಾಣ ಕರ್ನಾಟಕ ದಿನಾಚರಣೆಯ ಅಂಗವಾಗಿ ಇಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಸೇರಿ ಹಲವು ಮಹತ್ವದ ವಿಷಯಗಳ ಕುರಿತು ನಿರ್ಣಯ ಕೈಗೊಳ್ಳುವ ಸಾಧ್ಯತೆಗಳಿವೆ.ಸಭೆ ಕುರಿತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಪ್ರಿಯಾಂಕ್ ಖರ್ಗೆ ಮಾತನಾಡಿ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ, ಐಟಿ–ಬಿಟಿ, ಶಿಕ್ಷಣ ಇಲಾಖೆ, ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಪ್ರಸ್ತಾವನೆಗಳ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗಬೇಕು ಎನ್ನುವುದು ನಮ್ಮ ಸರ್ಕಾರದ ಆಶಯ. ಅದಕ್ಕಾಗಿಯೇ 10 ವರ್ಷಗಳ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಸಂಪುಟ ಸಭೆಯಲ್ಲಿ ರಾಜ್ಯಮಟ್ಟದಲ್ಲಿ ಆರ್ಥಿಕ ಇಲಾಖೆಯ ಮುಂದೆ ಇರುವ ಪ್ರಸ್ತಾವಗಳಿಗೆ ಒಪ್ಪಿಗೆ ಸಿಗಲಿದೆ. ಅದರಲ್ಲೂ ಮುಖ್ಯವಾಗಿ ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಪ್ರಸ್ತಾವಗಳು ಚರ್ಚೆಗೆ ಬರಲಿವೆ.ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ಅಮೆರಿಕ ಪ್ರವಾಸವನ್ನು ಮೊಟಕುಗೊಳಿಸಿ ವಾಪಸಾಗುತ್ತಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಗುಜರಾತ್ ಪ್ರವಾಸದಲ್ಲಿರುವುದರಿಂದ ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ಸಂಪುಟ ಸಭೆಗೆ ಹಾಜರಾಗುತ್ತಿಲ್ಲ ಎಂದು ತಿಳಿಸಿದರು.