ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಅಧಿಕಾರ ಪೂರ್ಣಗೊಳಿಸುವುದಿಲ್ಲ. ಮತ್ತೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇದೀಗ ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಗೆದ್ದರೆ ಈ ಸರ್ಕಾರ ಇರುವುದಿಲ್ಲ ಎಂದು ಹೇಳಿದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ, ಉಪಚುನಾವಣೆಯಲ್ಲಿ NDA ಮೈತ್ರಿಕೂಟ ಮೂರು ಕ್ಷೇತ್ರಗಳನ್ನು ಗೆದ್ದರೆ ಈ ಸರ್ಕಾರ ಉಳಿಯಲ್ಲ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಬಹುದು ಎಂದು ಹೇಳಿದರು.
ಬಿಜೆಪಿ-ಜೆಡಿಎಸ್ ರಾಜ್ಯದ ಅಭಿವೃದ್ಧಿಗಾಗಿ ಒಟ್ಟಾಗಿವೆ. ಬಿಜೆಪಿ ಜೆಡಿಎಸ್ ನಡುವೆ ಉತ್ತಮ ಬಾಂಧವ್ಯ ಇದೆ. ಬಿಜೆಪಿ ಜೆಡಿಎಸ್ ಅಣ್ಣ ತಮ್ಮಂದಿರಂತೆ ಇದ್ದೇವೆ. ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯುವುದು ನಮ್ಮ ಉದ್ದೇಶ. ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿ ಅಲ್ಲ ಎನ್ಡಿಎ ಅಭ್ಯರ್ಥಿ ಎಂದು ಹೇಳಿದರು.