ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಬಿಎನ್ ಬಚ್ಚೇಗೌಡ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಚುನಾವಣಾ ರಾಜಕೀಯಕ್ಕೂ ಗುಡ್ಬೈ ಹೇಳಿದ್ದಾರೆ. ಆದರೆ, ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುವುದಾಗಿ ಬಚ್ಚೇಗೌಡ ಪ್ರಕಟಿಸಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಪತ್ರ ಬರೆದಿರುವ ಬಿಎನ್ ಬಚ್ಚೇಗೌಡ, ಸ್ವ ಇಚ್ಛೆಯಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದು, ಅಂಗೀಕರಿಸಬೇಕು ಎಂದು ಕೋರಿದ್ದಾರೆ.
2008ರಲ್ಲಿ ಬಿಎನ್ ಬಚ್ಚೇಗೌಡ ಬಿಜೆಪಿ ಸೇರಿದ್ದರು. ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರು 2019ರಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ. ಕಳೆದ ಎರಡ್ಮೂರು ವರ್ಷಗಳಿಂದ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಪುತ್ರ ಶರತ್ ಬಚ್ಚೇಗೌಡ ಪಕ್ಷೇತರರಾಗಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ ನಂತರ ಬಚ್ಚೇಗೌಡ ಬಿಜೆಪಿಯಿಂದ ದೂರವಾಗಿದ್ದರು.