ಬೆಂಗಳೂರು, ಮಾ.9 : ಲೋಕಸಭಾ ಚುನಾವಣೆಗೆ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ 2-3 ದಿನಗಳಲ್ಲಿ ಬಿಡುಗಡೆಯಾಗಲಿದೆ.
ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ನವದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿಯ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ರಾಜ್ಯದ ೨೦ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮಗೊಳ್ಳಲಿದೆ ಎಂದು ಬಿಜೆಪಿ ಮೂಲಗಳು ಹೇಳಿವೆ.
ರಾಜ್ಯದ ಸುಮಾರು ೨೦ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಈಗಾಗಲೇ ವರಿಷ್ಠರು ಸಂಸದೀಯ ಮಂಡಳಿ ಹಾಗೂ ಕೇಂದ್ರ ಬಿಜೆಪಿ ಚುನಾವಣಾ ಸಮಿತಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ನಾಯಕರ ಜತೆ ಚರ್ಚೆ ನಡೆಸಿದ್ದು, ಪಟ್ಟಿಯೊಂದನ್ನು ಸಿದ್ಧಪಡಿಸಿದ್ದಾರೆ.
ನಾಳಿನ ಈ ಸಭೆಯಲ್ಲಿ ಈ ಪಟ್ಟಿಗೆ ಅನುಮೋದನೆ ಪಡೆದು ಭಾನುವಾರ ಇಲ್ಲವೆ ಸೋಮವಾರ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ.
ಹೊಸ ಮುಖ ಹಾಗೂ ಗೆಲ್ಲುವ ಮಾನದಂಡದ ಮೇಲೆ ಅಭ್ಯರ್ಥಿಗಳ ಆಯ್ಕೆ ಆಗಲಿದ್ದು, ಹಾಲಿ ಸಂಸದರಲ್ಲಿ 7-8 ಮಂದಿಗೆ ಟಿಕೆಟ್ ಕೈ ತಪ್ಪುವುದು ನಿಶ್ಚಿತ ಎನ್ನಲಾಗಿದೆ.
ಚಾಮರಾಜನಗರದ ಸಂಸದ ಶ್ರೀನಿವಾಸಪ್ರಸಾದ್, ತುಮಕೂರಿನ ಸಂಸದ ಜಿ.ಎಸ್. ಬಸವರಾಜು, ಹಾವೇರಿಯ ಸಂಸದ ಶಿವಕುಮಾರ್ ಉದಾಸಿ, ಚಿತ್ರದುರ್ಗದ ಸಂಸದ ಹಾಗೂ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಈಗಾಗಲೇ ಹೇಳಿದ್ದಾರೆ. ಹಾಗಾಗಿ ಈ ಕ್ಷೇತ್ರಗಳಿಗೆ ಹೊಸ ಮುಖಗಳನ್ನು ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸಲಾಗುತ್ತದೆ. ಇದರ ಜತೆಗೆ ದಾವಣಗೆರೆಯಿಂದ ಜಿ.ಎಂ. ಸಿದ್ದೇಶ್ವರ, ಬೆಳಗಾವಿಯ ಮಂಗಳ ಅಂಗಡಿ, ವಿಜಾಪುರದ ರಮೇಶ್ ಜಿಗಜಿಣಗಿ, ಕೊಪ್ಪಳದ ಕರಡಿ ಸಂಗಣ್ಣ, ರಾಯಚೂರಿನ ರಾಜ ಅಮರೇಶ್ವರನಾಯ್ಕ್ ಈ ಸಂಸದರಿಗೂ ಟಿಕೆಟ್ ಕೈ ತಪ್ಪುವ ಸಾಧ್ಯತೆಗಳಿವೆ.
ಶಿವಮೊಗ್ಗದಿಂದ ಬಿ.ವೈ. ರಾಘವೇಂದ್ರ, ಕಲಬರುಗಿಯಿಂದ ಉಮೇಶ್ ಜಾದವ್, ಧಾರವಾಡದಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಉಡುಪಿ-ಚಿಕ್ಕಮಗಳೂರಿನಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇವರುಗಳಿಗೆ ಟಿಕೆಟ್ ಮತ್ತೆ ಸಿಗುವುದು ಪಕ್ಕಾ ಆಗಿದೆ.
ಹಾವೇರಿಯಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲವೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ರವರಿಗೆ ಟಿಕೆಟ್ ಸಿಗುವ ಸಾಧ್ಯತೆಗಳಿದ್ದು, ಮೈಸೂರಿನಿಂದ ಪ್ರತಾಪ್‌ಸಿಂಹ ಟಿಕೆಟ್ ಪ್ರಯತ್ನ ನಡೆಸಿದ್ದು, ಇಲ್ಲಿ ಮೈಸೂರಿನ ರಾಜವಂಶಸ್ಥ ಯದುವೀರ್ ಒಡೆಯರ್ ರವರನ್ನು ಕಣಕ್ಕಿಳಿಸುವ ಬಗ್ಗೆಯೂ ಬಿಜೆಪಿ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಮೈಸೂರು ಟಿಕೆಟ್ ಯಾರಿಗೆ ಎಂಬುದು ಕುತೂಹಲ ಮೂಡಿಸಿದೆ.
ತುಮಕೂರಿನಿಂದ ಮಾಜಿ ಸಚಿವ ವಿ. ಸೋಮಣ್ಣ ಅವರಿಗೆ ಟಿಕೆಟ್ ಸಿಗುವುದು ಬಹುತೇಕ ನಿಶ್ಚಿತ. ಚಾಮರಾಜನಗರದಿಂದ ಶ್ರೀನಿವಾಸಪ್ರಸಾದ್ ಅವರ ಅಳಿಯನಿಗೆ ಟಿಕೆಟ್ ಸಿಗುವ ಸಾಧ್ಯತೆಗಳು ಹೆಚ್ಚಿವೆ. ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡುವ ತೀರ್ಮಾನವೂ ಆಗಿದೆ ಎಂದು ಹೇಳಲಾಗಿದೆ.
ಬೆಂಗಳೂರು ಉತ್ತರದಿಂದ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಡಿ.ವಿ. ಸದಾನಂದಗೌಡ ಅವರ ಜತೆ ಮಾಜಿ ಸಚಿವ ಸಿ.ಟಿ .ರವಿ ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದು ಇಲ್ಲಿ ವರಿಷ್ಠರು ಯಾರಿಗೆ ಟಿಕೆಟ್ ನೀಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ಉತ್ತರ ಕನ್ನಡ ಲೋಕಸಭಾ ಹಾಲಿ ಸಂಸದ ಅನಂತ್‌ಕುಮಾರ್ ಹೆಗಡೆ ಅವರಿಗೆ ಟಿಕೆಟ್ ಸಿಗಲಿದೆ. ಮಂಗಳೂರಿನಿಂದ ನಳಿನ್ ಕುಮಾರ್ ಕಟೀಲು ಬದಲು ಹೊಸ ಮುಖಕ್ಕೆ ಅವಕಾಶ ನೀಡುವ ಬಗ್ಗೆಯೂ ಚರ್ಚೆಗಳು ನಡೆದಿದೆ ಎಂದು ಹೇಳಲಾಗಿದೆ.
2-3 ಮೂರು ದಿನಗಳಲ್ಲಿ ಬಿಜೆಪಿಯಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ ಯಾರಿಗೆ ಟಿಕೆಟ್ ಕೈ ತಪ್ಪಲಿದೆ ಎಂದು ಗೊತ್ತಾಗಲಿದೆ.
ಬಾಕ್ಸ್
ವರಿಷ್ಠರಿಂದ ಪಟ್ಟಿ ಪ್ರಕಟ
ಲೋಕಸಭಾ ಚುನಾವಣೆಗೆ 2-3 ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರು ಪ್ರಕಟಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಕೇಂದ್ರ ಚುನಾವಣಾ ಸಮಿತಿ ಸಭೆ ಇದ್ದು, ಈ ಸಭೆಯಲ್ಲಿ ರಾಜ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಅಮಂತಿಮಗೊಳ್ಳಲಿದೆ. ಎಲ್ಲ 28 ಕ್ಷೇತ್ರಗಳಲ್ಲೂ ಗೆದ್ದು ಹೊಸ ಇತಿಹಾಸವನ್ನು ಬಿಜೆಪಿ ಸೃಷ್ಟಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆಯಲ್ಲಿ ಹಿಂದೆಂದೂ ಬಾರದ ಅತ್ಯುತ್ತಮ ಫಲಿತಾಂಶ ಈ ಬಾರಿ ಬರಲಿದೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿದೆ. ನಾಳೆಯೊಳಗೆ ಎಲ್ಲವೂ ಅಂತಿಮವಾಗಲಿದೆ ಎಂದು ಅವರು ಹೇಳಿದರು.