ಗದಗ : ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯ ಬೆತ್ತಲೆ ಪ್ರಕರಣ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆಯನ್ನು ಖಂಡಿಸಿ ನಗರದ ಹೃದಯ ಭಾಗದಲ್ಲಿರುವ ಮಹಾತ್ಮ ಗಾಂಧಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಟಾಯರ್ಗೆ ಬೆಂಕಿ ಹಚ್ಚಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾನೂನು ಸಚಿವ ಎಚ್.ಕೆ ಪಾಟೀಲ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಇದೇ ವೇಳೆ ರಸ್ತೆ ಬಂದ್ ಮಾಡಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಹೋರಾಟ ನಡೆಸಿದರು. ಘಟನೆ ಹೊಣೆ ಹೊತ್ತು ಕಾನೂನು ಸಚಿವ ಎಚ್.ಕೆ ಪಾಟೀಲ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಮುತ್ತಣ್ಣ ಲಿಂಗನಗೌಡ್ರ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ರಾಜು ಕುರಡಗಿ, ಮಾಜಿ ದ್ರಾಕ್ಷಾರಸ ನಿಗಮ ಮಂಡಳಿ ಅಧ್ಯಕ್ಷ ಕಾಂತಿಲಾಲ ಬನಸಾಲಿ, ನಗರಸಭೆ ಅಧ್ಯಕ್ಷ ಶ್ರೀಮತಿ ಉಷಾ ಮಹೇಶ್ ದಾಸರ್, ಅನಿಲ್ ಅಬ್ಬಿಗೇರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.