ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಪಂಚ ಯೋಜನೆಗಳ ಫಲಾನುಭವಿಗಳ ಅನುಷ್ಠಾನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯನ್ನು ಲೇವಡಿ ಮಾಡಿದ್ದಾರೆ. 487 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಮ ಸಮಾಜ ನಿರ್ಮಿಸಲು ಶ್ರಮಿಸುತ್ತಿದೆ. ಶೋಷಿತರು, ದೀನ ದಲಿತರು, ಹಿಂದುಳಿದ ವರ್ಗದವರು ಮುಖ್ಯವಾಹಿಗೆ ತರಲು ಕಾಂಗ್ರೆಸ್ ಪಣ ತೊಟ್ಟಿದೆ. ನಮ್ಮ ಸರ್ಕಾರ ಸಂವಿಧಾನದ ಆಶಯಗಳಂತೆ ಸರ್ವರ ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಸಮಾಜದಲ್ಲಿ ಸರ್ವರಿಗೂ ಅವಕಾಶಗಳನ್ನು ನಾಶ ಮಾಡಬೇಕೆಂದು ಬಿಜೆಪಿ ಪಕ್ಷ ಸಂವಿಧಾನ ಬದಲಿಸುವ ಮತ್ತು ಮನುಸ್ಮೃತಿ ಪರವಾಗಿ ಮಾತನಾಡುತ್ತಿದೆ. ಬಿಜೆಪಿ ಹಾಲಿ ಸಂಸದರು, ಮಾಜಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ಬಿಜೆಪಿ 400 ಸ್ಥಾನ ಗೆದ್ದರೆ ಸಂವಿಧಾನ ಬದಲಾಯಿಸುವುದಾಗಿ ಹೇಳಿಕೆ ನೀಡಿದ್ದಾರೆ. ಆದರೇ ಇವರ ಮೇಲೆ ಬಿಜೆಪಿ ಹೈ ಕಮಾಂಡ್ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಬಿಜೆಪಿ ಅಜೆಂಡಾ ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಬದಲಿಸಲು ಹೊರಟಿರುವವರಿಗೆ ಈ ಭಾರಿಯ ಲೋಕಸಭೆ ಎಲೆಕ್ಷನ್ನಲ್ಲಿ ನಾಡಿನ ಜನತೆ ಉತ್ತರ ಕೊಡಬೇಕು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಇದೇ ವೇಳೆ ಬಿಜೆಪಿ ಮತ್ತು ಜೆಡಿಎಸ್ನ ಮೈತ್ರಿ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂದಿನ ಜನ್ಮ ಮುಸ್ಲೀಂ ಆಗಿ ಹುಟ್ಟಬೇಕು ಎಂದವರು ಇಂದು ಬಿಜೆಪಿ ಜತೆ ಸೇರಿ ಜಾತ್ಯಾತೀತ ವಿರೋಧಿಗಳನ್ನು ಹೊಗಳುತ್ತಿದ್ದಾರೆ ಎಂದು ಜೆಡಿಎಸ್ ಪಕ್ಷವನ್ನು ಸಿಎಂ ಸಿದ್ದರಾಮಯ್ಯ ಟೀಕಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ, ಜಿಲ್ಲಾಧಿಕಾರಿ ಡಾ.ಶಿವಶಂಕರ್.ಎನ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿಭಾ ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ- ಸಿಎಂ ಸಿದ್ದರಾಮಯ್ಯ
RELATED ARTICLES