ಹುಬ್ಬಳ್ಳಿ: ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮುಡಾ ಸೈಟ್ ವಾಪಸ್ ಕೊಟ್ಟಿರುವ ವಿಚಾರವಾಗಿ ಈ ಕೆಲಸವನ್ನು ಅವರು ಮೊದಲೇ ಮಾಡಬೇಕಿತ್ತು. ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ಮಾಡಿಸಿದ್ದರೆ ಮುಗಿದಿತ್ತು. ಸಿದ್ದರಾಮಯ್ಯ ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಬರುತ್ತಿರಲಿಲ್ಲ. ಆದರೆ ಆಗ ಸಮರ್ಥನೆ ಮಾಡಿಕೊಂಡರು ಎಂದು ಪ್ರತಿಕ್ರಿಯೆ ನೀಡಿದರು.
ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟು, ಪ್ರಕರಣ ದಾಖಲಾಗಿ, ಈಗ ತನಿಖೆ ಆರಂಭವಾಗಿದೆ. ಈಗ ಸೈಟ್ ವಾಪಸ್ ಕೊಟ್ಟಿರುವುದರಿಂದ ಹಲವಾರು ಪ್ರಶ್ನೆಗಳು ಉದ್ಭವಿಸಿವೆ. ವಾಪಸ್ ಕೊಡುವ ಮೂಲಕ ಮೂಲಕ ಮತ್ತಷ್ಟು ಜಟಿಲ ಮಾಡಿಕೊಂಡಿದ್ದಾರೆ. ಎಫ್‌ಐಆರ್ ಆದ ಮೇಲೆ ತನಿಖೆ ಆಗಲೇಬೇಕು. ಒಂದು ಕಡೆ ಲೋಕಾಯುಕ್ತ ತನಿಖೆ ನಡೆದಿದೆ. ಮತ್ತೊಂದು ಕಡೆ ಇಡಿ ಎಫ್‌ಐಆರ್ ಮಾಡಿಕೊಂಡು ತನಿಖೆ ಮಾಡುತ್ತಿದೆ. ಕಾಂಗ್ರೆಸ್ (Congress) ನಾಯಕರು ತಪ್ಪೇ ನಡೆದಿಲ್ಲ ಎಂದು ಹೇಳುತ್ತಿದ್ದರು ಎಂದು ತಿಳಿಸಿದರು.