ಬಿಹಾರ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯದ ಎಲ್ಲಾ ಜನರಿಗೆ 125 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸಿಎಂ ನಿತೀಶ್ ಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ನಾವು ಮೊದಲಿನಿಂದಲೂ ಕಡಿಮೆ ದರದಲ್ಲಿ ವಿದ್ಯುತ್ ಪೂರೈಕೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಸಿಎಂ ನಿತೀಶ್ ಕುಮಾರ್ ಆಗಸ್ಟ್ 1 ರಿಂದಲೇ ಅಂದರೆ ಜುಲೈ ಬಿಲ್ನಿಂದಲೇ ರಾಜ್ಯದ ಎಲ್ಲಾ ಗೃಹಬಳಕೆದಾರರಿಗೆ 125 ಯೂನಿಟ್ವರೆಗಿನ ವಿದ್ಯುತ್ಗೆ ಯಾವುದೇ ಹಣ ಪಾವತಿಸಬೇಕಾಗಿಲ್ಲ. ಉಚಿತ ವಿದ್ಯುತ್ ಯೋಜನೆಯ ಮೂಲಕ ರಾಜ್ಯದ 1.67 ಕೋಟಿ ಜನರಿಗೆ ಪ್ರಯೋಜನವಾಗಲಿದೆ. ಮುಂದಿನ ಮೂರು ವರ್ಷದವರೆಗೆ ಯೋಜನೆ ಜಾರಿಯಲ್ಲಿರುತ್ತದೆ ಎಂದು ಹೇಳಿದ್ದಾರೆ. ಇನ್ನು ಎಲ್ಲಾ ಗೃಹಬಳಕೆದಾರರ ಒಪ್ಪಿಗೆಯೊಂದಿಗೆ, ಸೌರ ವಿದ್ಯುತ್ ಸ್ಥಾವರಗಳನ್ನು ಅವರ ಮೇಲ್ಛಾವಣಿಗಳ ಮೇಲೆ ಅಥವಾ ಹತ್ತಿರದ ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ಕುಟೀರ ಜ್ಯೋತಿ ಯೋಜನೆಯಡಿ ಬಡ ಕುಟುಂಬಗಳಿಗೆ, ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುವ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವು ಭರಿಸುತ್ತದೆ ಮತ್ತು ಉಳಿದವರಿಗೆ ಸರ್ಕಾರವು ಸೂಕ್ತ ಬೆಂಬಲವನ್ನು ನೀಡುತ್ತದೆ ಎಂದು ಹೇಳಿದ್ದಾರೆ.


