ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ಷಕಾಂಕ್ಷೆಯ 5ನೇ ಗ್ಯಾರಂಟಿಯಾದ ಯುವ ನಿಧಿ ಯೋಜನೆಗೆ ಇಂದು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ಚಾಲನೆ ನೀಡಲಾಗುತ್ತದೆ. ಹಳೆ ಜೈಲು ಆವರಣದ ಪ್ರೀಡಂ ಪಾರ್ಕ್‌ನಲ್ಲಿ ಬೃಹತ್ ವೇದಿಕೆ ಸಿದ್ದಗೊಂಡಿದ್ದು, ಕಾರ್ಯಕ್ರಮದ ವೀಕ್ಷಣೆಗೆ ಬೃಹತ್ ಎಲ್ಇಡಿ ವಾಲ್ ಆಳವಡಿಸಲಾಗಿದೆ.
ಇನ್ನು ಈಗಾಗಲೇ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆದಿದ್ದು ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ನಾಯಕರ ಮತ್ತು ಸ್ಥಳೀಯ ಮುಖಂಡರ ಬ್ಯಾನರ್ಗಳು, ಪ್ಲೆಕ್ಸ್‌ಗಳು ರಾರಾಜಿಸುತ್ತಿವೆ. ನಗರದ ಹೃದಯ ಭಾಗದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಒಂದೂವರೆ ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದ್ದು ವಾಹನ ದಟ್ಟಣೆ ತಡೆಯಲು ಸುಗಮ ಸಂಚಾರ ಮಾರ್ಗ ಹಾಗೂ ಪಾರ್ಕಿಂಗ್ ವ್ಯವಸ್ಥೆಗೆ ಪೊಲೀಸ್ ಇಲಾಖೆ ಸರ್ವ ಸನ್ನದ್ಧವಾಗಿದೆ.
ಲೋಕಸಭೆ ಚುನಾವಣೆ ಹತ್ತಿರವಾಗ್ತಿರುವ ಸಂದರ್ಭದಲ್ಲಿ 5 ನೇ ಗ್ಯಾರಂಟಿ ಯೋಜನೆಯಾದ ಯುವ ನಿಧಿಯನ್ನು ಜಾರಿಗೆ ತರುತ್ತಿದೆ. ಈಗಾಗಲೇ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಚಾಲನೆ ಸಿಕ್ಕಿದೆ. ಆನ್‌ಲೈನ್ ಮೂಲಕ ಈವರೆಗೆ 65 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಂದ ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ಮಾಡಿಕೊಂಡ ಫಲಾನುಭವಿಗಳ ಖಾತೆಗೆ ಹಣ ಪಾವತಿಸುವ ಪ್ರಕ್ರಿಯೆಗೆ ಶಿವಮೊಗ್ಗದಲ್ಲೇ ಅಧಿಕೃತವಾಗಿ ಇಂದು ಚಾಲನೆ ನೀಡಲಾಗುತ್ತಿದೆ.