ತುಮಕೂರು: ಅಕ್ಷರ ದಾಸೋಹ ಮತ್ತು ಅನ್ನ ದಾಸೋಹದ ಮೂಲಕ ಲಕ್ಷಾಂತರ ಬಡ ಮಕ್ಕಳ ಬಾಳಿಗೆ ಬೆಳಕಾಗಿದ್ದ ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ನಾಳೆ (ಬುಧವಾರ) ಮಠದ ಆವರಣದಲ್ಲಿ ಅತ್ಯಂತ ಜರುಗಲಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ದೇಶದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಆಗಮಿಸುತ್ತಿರುವುದು ವಿಶೇಷವಾಗಿದೆ.
ನಾಳೆ ಬೆಳಿಗ್ಗೆ 10:50ಕ್ಕೆ ಸಿದ್ದಗಂಗಾ ಮಠಕ್ಕೆ ಉಪರಾಷ್ಟ್ರಪತಿಗಳು ಆಗಮಿಸಲಿದ್ದು, ಶಿವಕುಮಾರ ಶ್ರೀಗಳ ಪವಿತ್ರ ಗದ್ದಿಗೆಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ 11 ಗಂಟೆಗೆ ಮಠದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಆಯೋಜಿಸಲಾಗಿರುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉಪರಾಷ್ಟ್ರಪತಿಗಳ ಜೊತೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಉಪಸ್ಥಿತರಿರಲಿದ್ದಾರೆ.
ಪುಣ್ಯ ಸಂಸ್ಮರಣೋತ್ಸವದ ಅಂಗವಾಗಿ ಮಠದಲ್ಲಿ ಬೆಳಿಗ್ಗೆ 5 ಗಂಟೆಯಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಲಿವೆ. ಮಂತ್ರಘೋಷಗಳೊಂದಿಗೆ ಶ್ರೀಗಳ ಗದ್ದಿಗೆಗೆ ವಿಶೇಷ ಅಭಿಷೇಕ ಮತ್ತು ಪೂಜೆ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಶ್ರೀಗಳ ಉತ್ಸವ ಮೂರ್ತಿಯನ್ನು ಭವ್ಯ ‘ರುದ್ರಾಕ್ಷಿ ಮಂಟಪ’ದಲ್ಲಿ ಪ್ರತಿಷ್ಠಾಪಿಸಿ ಮಠದ ಆವರಣದಲ್ಲಿ ಮೆರವಣಿಗೆ ಮಾಡಲಾಗುವುದು.
ಈ ಪವಿತ್ರ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸದ್ಗುರು ಶ್ರೀ ಮಧುಸೂದನ ಸಾಯಿ ಹಾಗೂ ಮಠದ ಉತ್ತರಾಧಿಕಾರಿ ಶ್ರೀ ಶಿವಸಿದ್ದೇಶ್ವರ ಸ್ವಾಮಿಗಳು ವಹಿಸಲಿದ್ದಾರೆ. ಗಣ್ಯರ ಭೇಟಿಯ ಹಿನ್ನೆಲೆಯಲ್ಲಿ ಮಠದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.


