Freedom TV

ನೀರಿನ ದಂಧೆ ತಡೆಯಲು ಕ್ರಮ: ಡಿ.ಕೆ. ಶಿವಕುಮಾರ್

ಬೆಂಗಳೂರು: “ಕುಡಿಯುವ ನೀರಿನ ದಂಧೆ ತಡೆಗಟ್ಟಿ ನೀರಿನ ಅಭಾವವನ್ನು ನೀಗಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕೆಲವರು ರಾಜಕಾರಣಕ್ಕಾಗಿ ಟೀಕೆ ಮಾಡುತ್ತಿದ್ದು, ಅವರಿಗೆ ರಾಜಕಾರಣ ಮಾಡಬೇಡಿ ಎಂದು ಹೇಳುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು “ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಾಗುತ್ತಿರುವ ಪ್ರದೇಶಗಳಲ್ಲಿ ನೀರಿನ ಕೊರತೆ ಇಲ್ಲ, ಕೊಳವೆ ಬಾವಿಗಳ ಬತ್ತಿರುವುದರಿಂದ ಇವುಗಳನ್ನೇ ಅವಲಂಬಿಸಿದ್ದ ಪ್ರದೇಶಗಳಲ್ಲಿ ನೀರಿನ ಅಭಾವ ಎದುರಾಗಿದೆ. ಈ ನೀರಿನ ಅಭಾವ ನೀಗಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಹೀಗಾಗಿ ಖಾಸಗಿ ನೀರಿನ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ಪಡೆದು ನೀರು ಪೂರೈಸಲು ಮುಂದಾಗಿದ್ದೇವೆ. ಕೆಲವು ಕೊಳಗೇರಿ ಪ್ರದೇಶದಲ್ಲಿ ಉಚಿತವಾಗಿ ನೀರು ನೀಡುತ್ತಿದ್ದೇವೆ. ಉಳಿದಂತೆ ಅಪಾರ್ಟ್ ಮೆಂಟ್ ಗಳಿಗೆ ಪೂರೈಸುವ ನೀರಿಗೆ ದರ ನಿಗದಿ ಮಾಡಿದ್ದು, ಕೈಗಾರಿಕೆಗಳ ಬಳಕೆಗೆ ಪ್ರತ್ಯೇಕ ದರ ನಿಗದಿ ಮಾಡಲಾಗಿದೆ ಎಂದು ಹೇಳಿದರು.

ಬೆಂಗಳೂರಿನ ಸುತ್ತಮುತ್ತಲು ಇರುವ ನೀರಾವರಿ ಕೊಳವೆ ಬಾವಿಯನ್ನು ನಾವು ಗುರುತಿಸಿದ್ದು, ಅಗತ್ಯ ಬಿದ್ದರೆ ಅವುಗಳನ್ನು ಬಳಸಿಕೊಳ್ಳುತ್ತೇವೆ. ಇನ್ನು ಬೆಂಗಳೂರಿನ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆ ಮೇ ಅಂತ್ಯದೊಳಗೆ ಪೂರ್ಣಗೊಳಿಸುತ್ತೇವೆ ಎಂದು ಹೇಳಿದರು.
ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ತಮಿಳುನಾಡಿಗೆ ನೀರು ಬಿಟ್ಟಿರುವ ಆರೋಪ ಸುಳ್ಳು. ತಮಿಳುನಾಡಿಗೆ ಈ ಸಂದರ್ಭದಲ್ಲಿ ನೀರು ಬಿಡುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಬಿಟ್ಟಿಲ್ಲ, ಬಿಡುವುದೂ ಇಲ್ಲ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಾವು ನೀರಿನ ವಿಚಾರದಲ್ಲಿ ಜವಾಬ್ದಾರಿ ಹೊಂದಿದ್ದೇವೆ. ಆದರೆ ಸದ್ಯದ ಮಟ್ಟಿಗೆ ನೀರಿನ ಅಭಾವ ನೀಗಿಸಲು ಹಾಲಿ ಇರುವ ಕೊಳವೆ ಬಾವಿಗಳನ್ನು ಮರು ಕೊರೆಯುವುದು, ಹೊಸ ಕೊಳವೆ ಬಾವಿ ಕೊರೆಯಲು ತೀರ್ಮಾನಿಸಿದ್ದೇವೆ ಎಂದರು.

ಮಾಧ್ಯಮಗಳು ತೋರಿಸುತ್ತಾರೆ ಎಂದು ಬಿಜೆಪಿಯವರು ನೀರಿನ ಹಾಹಾಕಾರ ಸೃಷ್ಟಿಸುತ್ತಿದ್ದಾರೆ. ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ಅನುದಾನ ಇಟ್ಟಿದ್ದ ಬಿಜೆಪಿ ಸರ್ಕಾರ ಅದನ್ನು ಹಿಂಪಡೆದಿದ್ದು ಯಾಕೆ? ಕೇಂದ್ರ ಸರ್ಕಾರದ ಬಳಿ ಎಲ್ಲಾ ಸಂಸದರು ಹೋಗಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿದರೆ ಸಮಸ್ಯೆ ಬಗೆಹರಿಯುತ್ತದೆ. ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರುವುದು ನಮ್ಮ ವಿರುದ್ಧವಲ್ಲ, ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು ಎಂದು ಹೇಳಿದರು.
ಬಿಜೆಪಿಗೆ ದೇಶದ ಐಕ್ಯತೆ ಬಗ್ಗೆ, ಸಂವಿಧಾನದ ಬಗ್ಗೆ ಗೌರವ ಇದ್ದಿದ್ದರೆ ಇಷ್ಟು ಹೊತ್ತಿಗಾಗಲೇ ಅನಂತ ಕುಮಾರ್ ಹೆಗಡೆ ಅವರನ್ನು ಉಚ್ಛಾಟನೆ ಮಾಡಬಹುದಾಗಿತ್ತು. ಸಂವಿಧಾನ ನಮ್ಮ ಪಾಲಿನ ಭಗವದ್ಗೀತೆ, ಕುರಾನ್ ಹಾಗೂ ಬೈಬಲ್ ಆಗಿದೆ” ನಾಯಕರು ಚುನಾವಣಾ ಸಮಿತಿ ಸಭೆ ನಡೆಸಿ ನಮ್ಮ ಪ್ರಸ್ತಾವನೆಯನ್ನು ಒಪ್ಪಬಹುದು ಅಥವಾ ನಿರಾಕರಿಸಬಹುದು ಎಂದು ಹೇಳಿದರು.

Comments (0)

Your email address will not be published. Required fields are marked *

Back to top button