ಬೆಂಗಳೂರು: ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ವತಿಯಿಂದ ಬೆಂಗಳೂರಿನ ರಾಜಾಜಿನಗರದ ರಾಮಮಂದಿರ ಮೈದಾನದಲ್ಲಿ ಹೋಳಿ ಹಬ್ಬವನ್ನು ಆಚರಿಸಲಾಯಿತು. ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕ. ಭಾಗದ ಜನರು ಪ್ರತಿ ವರ್ಷದಂತೆ ಈ ವರ್ಷವೂ ಕಾಮದಹನ ಮಾಡಿ, ಬಣ್ಣದೋಕುಳಿ ಆಡಿ, ಹೋಳಿ ಹಬ್ಬವನ್ನು ಆಚರಿಸಿದರು.
ಹೋಳಿ ಹಬ್ಬದ ಕುರಿತು ಮಾತನಾಡಿದ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ, ನಮ್ಮ ಉತ್ತರ ಕರ್ನಾಟಕ ಭಾಗದ ಸಂಸ್ಕೃತಿಯ ಪ್ರತಿಬಿಂಬವಾಗಿ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಈ ಹಬ್ಬವನ್ನು ವಿಜೃಂಬಣೆಯಿಂದ ಆಚರಿಸಲಾಗುತ್ತದೆ. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕದ ಜನರು ನಮ್ಮ ಸಂಸ್ಕೃತಿ ಪರಂಪರೆ ಉಳಿಸಿಕೊಂಡು ಹೋಗಲು ಈ ಹಬ್ಬವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.
ಮಹಾಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಹೋಳಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಐದು ದಿನಗಳ ಕಾಲ ಆಚರಿಸಲಾಗುತ್ತದೆ. ಕಾಮಣ್ಣನ ಕೂಡಿಸುವುದು, ಹೋಳಿ ಹಾಡು ಹಾಡುವುದು, ಕಾಮದಹನ ಕಾರ್ಯಕ್ರಮಗಳನ್ನು ಎಲ್ಲರೂ ಸೇರಿ ಆಚರಿಸುತ್ತಾರೆ.
ಉತ್ತರ ಕರ್ನಾಟಕದಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವ ಜನರು ನಮ್ಮ ಭಾಗದ ಪ್ರಮುಖ ಸಾಂಸ್ಕೃತಿಕ ಹಬ್ಬಗಳಾದ ರೊಟ್ಟಿ ಪಂಚಮಿ, ಬನ್ನಿ ಬಂಗಾರ ಹಬ್ಬ, ಹೋಳಿ ಹಬ್ಬವನ್ನು ಬೆಂಗಳೂರಿನಲ್ಲಿ ಆಚರಿಸುವ ಮೂಲಕ ನಮ್ಮ ಸಂಸ್ಕೃತಿ ಉಳಿಸಿ ಬೆಳೆಸುವುದು ಹಾಗೂ ನಮ್ಮ ಮುಂದಿನ ಪೀಳಿಗೆಗೆ ಅದನ್ನು ಪರಿಚಯಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಮಹಾಸಂಸ್ಥೆಯ ಕಾರ್ಯದರ್ಶಿ ಬಸಯ್ಯ ನಂದಿಕೋಲ್, ಶಿವಕುಮಾರ್ ಸರಶೆಟ್ಟಿ, ಭೀಮಪ್ಪ ನಾಲತ್ವಾಡ್ ಸೇರಿದಂತೆ ಮಹಾ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಉತ್ತರ ಕರ್ನಾಟಕ ಭಾಗದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.