ರಾಜ್ಯಸುದ್ದಿ

ಮಾದಪ್ಪನಿಗೆ ಹರಿದು ಬಂದ ಮುಕ್ಕೋಟಿ ಆದಾಯ

ಚಾಮರಾಜನಗರ : ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 25 ದಿನಗಳ ಅವಧಿಯಲ್ಲಿ ದಾಖಲೆಯ 3.13 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯಿರುವ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ರಾತ್ರಿ 10:30ರವರೆಗೂ ನಡೆಯಿತು.

ಈ ಬಾರಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದರಿಂದ ಹರಕೆಯ ರೂಪದಲ್ಲಿ ನಗದು, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ. ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 3,13,00,931 ರೂಪಾಯಿ ನಗದು ಸಂಗ್ರಹವಾಗಿದ್ದು, 47 ಗ್ರಾಂ ಚಿನ್ನ ಮತ್ತು 2 ಕೆಜಿ 309 ಗ್ರಾಂ ಬೆಳ್ಳಿಯ ವಸ್ತುಗಳು ಸಂಗ್ರಹವಾಗಿದೆ.

ಇದಲ್ಲದೆ ಯುಎಸ್ ಡಾಲರ್, ಬಾಂಗ್ಲಾದೇಶ ನೇಪಾಳ , ಮಲೇಶಿಯಾ ಸೇರಿದಂತೆ 7 ವಿದೇಶಿ ನೋಟುಗಳ ಜೊತೆಗೆ ಅಮಾನ್ಯಗೊಂಡಿರುವ 2000 ಮುಖಬೆಲೆಯ 26 ನೋಟುಗಳು ಹುಂಡಿಯಲ್ಲಿ ಸಂಗ್ರಹವಾಗಿದೆ. ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕ ಅಧೀಕ್ಷಕ ನಾಗೇಶ್, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

Comments (0)

Your email address will not be published. Required fields are marked *

Back to top button