ಬೆಂಗಳೂರು: ಲೋಕಸಭೆ ಚುನಾವಣೆ 2024ಕ್ಕೆ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗೆ ಇನ್ನು ಐದು ದಿನಗಳು ಬಾಕಿಯಷ್ಟೆ. ಈ ಸಂದರ್ಭದಲ್ಲಿ ಇಂದು ಭಾನುವಾರ ಬೆಂಗಳೂರಿನಲ್ಲಿ ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಡಿ ವಿ ಸದಾನಂದ ಗೌಡ ಜಂಟಿ ಸುದ್ದಿಗೋಷ್ಠಿ ನಡೆಸಿದರು.
ಕಾಂಗ್ರೆಸ್ ಸರ್ಕಾರ ವಿರುದ್ಧ ಟೀಕಾಪ್ರಹಾರ ನಡೆಸಿದ ಬಿ ಎಸ್ ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ. ರಾಜ್ಯದಲ್ಲಿ ಕೊಲೆ, ಹಲ್ಲೆ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಇದೊಂದು ಕ್ರೂರ ಸರ್ಕಾರ ಎಂದು ಕಿಡಿಕಾರಿದರು. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದಿದೆ. ಸಿದ್ದರಾಮಯ್ಯ ಅವರು ತಮ್ಮದೇ ಪಕ್ಷದ ಕಾರ್ಯಕರ್ತನಿಗೆ ನ್ಯಾಯ ಕೊಡಿಸಿಲ್ಲ ಎಂದು ವಾಗ್ದಾಳಿ ಮಾಡಿದರು.
ಕನ್ನಡಿಗರು ಬದುಕಿನ ಗ್ಯಾರಂಟಿಗಳನ್ನು ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ.
– ಶ್ರೀ @BSYBJP, ಮಾಜಿ ಮುಖ್ಯಮಂತ್ರಿಗಳು#CongressFailsKarnataka pic.twitter.com/8cdtIiCjuO
— BJP Karnataka (@BJP4Karnataka) April 21, 2024
ಭಾರತದ ಭವಿಷ್ಯಕ್ಕೆ ಮತ ಕೇಳುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಕಾರು ಹಾಯಿಸಿದ್ದಾರೆ. ಕಲಾವಿದರಾದ ಹರ್ಷಿಕಾ ಪೂಣಚ್ಚ ಮೇಲೆ ಹಲ್ಲೆ ಮಾಡಿದ್ದಾರೆ. ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆ ಮಾಡಿ ಅಮಾನುಷವಾಗಿ ನಡೆದುಕೊಂಡರೂ ಕ್ರಮ ಕೈಗೊಂಡಿಲ್ಲ. ಕೋಲಾರ ಮತ್ತು ಶಿವಮೊಗ್ಗದಲ್ಲಿ ಔರಂಗಜೇಬ್ ಕಟೌಟ್ ಹಾಕಿದ್ದರು. ಮಂಡ್ಯದಲ್ಲಿ ಪೊಲೀಸ್ ಅಧಿಕಾರಿಗಳ ಮೂಲಕ ಹನುಮ ಧ್ವಜ ಇಳಿಸಿದ್ದಾರೆ. ಇದೊಂದು ಕ್ರೂರ ಸರ್ಕಾರ. ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಳೆದೊಂದು ವರ್ಷದಿಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದ ನಂತರ ಆಗಿರುವ ಅಪರಾಧ ಪ್ರಕರಣಗಳನ್ನು ಉಲ್ಲೇಖಿಸಿದರು.