ಹೈಕೋರ್ಟ್ ತೀರ್ಪು ಪ್ರಕಟ ಬೆನ್ನಲೆ ಮುಖ್ಯಮಮತ್ರಿ ಸಿದ್ದರಾಮಯ್ಯನವರು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ ಕಾಯ್ದೆ 19ರಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17ಎ ಪ್ರಕಾರ ತನಿಖೆಗೆ ಉಚ್ಚನ್ಯಾಯಾಲಯ ಆದೇಶ ನೀಡಿದೆ. ಈ ತೀರ್ಪಿನ ಮೇಲೆ ಮುಂದಿನ ಕಾನೂನು ಹೋರಾಟದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ, ತೀರ್ಮಾನ ಮಾಡಲಾಗುವುದು. ನಾನು ತಪ್ಪು ಮಾಡಿಲ್ಲ. 17ಎ ರಡಿ ತನಿಖೆ ಮಾಡಲು ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ಇಡೀ ದೇಶದಲ್ಲಿ ವಿಪಕ್ಷಗಳ ಸರ್ಕಾರದ ಮೇಲೆ ಪಿತೂರಿ ಮಾಡಿದಂತೆ ಕರ್ನಾಟಕದಲ್ಲಿಯೂ ನನ್ನ ಹಾಗೂ ನಮ್ಮ ಸರ್ಕಾರದ ವಿರುದ್ಧ ಪಿತೂರಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಖಂಡಿತಾ ನನಗೆ ಜಯ ಸಿಗಲಿದೆ. ಬಿಜೆಪಿಯವರನ್ನು ನಾವು ರಾಜಕೀಯವಾಗಿ ಎದುರಿಸುತ್ತೇವೆ. ಬಿಜೆಪಿಯವರು ಹೇಳಿದ ಮಾತ್ರಕ್ಕೆ ನಾನು ರಾಜೀನಾಮೆ ಏಕೆ ಕೊಡಬೇಕು? ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೇಲೆ ಎಫ್.ಐ.ಆರ್ ಆಗಿದ್ದು, ಅವರು ಜಾಮೀನಿನ ಮೇಲೆ ಇದ್ದಾರೆ. ಅವರು ರಾಜೀನಾಮೆ ಕೊಟ್ಟಿದ್ದಾರೆಯೇ? ಇದು ಅವರಿಗೆ ಅನ್ವಯವಾಗುವುದಿಲ್ಲವೇ? ತನಿಖೆ ಹಂತದಲ್ಲಿಯೇ ರಾಜೀನಾಮೆ ಕೊಡಬೇಕು ಎನ್ನುವ ಬಿಜೆಪಿ ವಾದಕ್ಕೆ ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ಏನೆಂದು ಕೇಳಿ ತಿಳಿಯಿರಿ .ಈ ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ ,ಎಚ್.ಕೆ.ಪಾಟೀಲ್,ಕೆ.ಜೆ.ಜಾರ್ಜ್ ಜೊತೆಗೆ ಸಚಿವರು,ಶಾಸಕರು, ಪಕ್ಷದ ಕಾರ್ಯಕರ್ತರು ಸಹ ಪಾಲ್ಗೋಂಡಿದ್ದರು.
ಇದೇ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ,ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಮಾಡಲಾಗಿರುವ ಆರೋಪ ಬಿಜೆಪಿ ಹಾಗೂ ಜೆಡಿಎಸ್ ಅವರ ಕುತಂತ್ರ. ಇವರ ಕುತಂತ್ರಕ್ಕೆ ನಮ್ಮ ಪಕ್ಷ, ನಮ್ಮ ಸರ್ಕಾರ ಜಗ್ಗೋದಿಲ್ಲ ಹಾಗೂ ಬಗ್ಗೋದಿಲ್ಲ. ಇಡೀ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಮುಖ್ಯಮಂತ್ರಿಗಳ ಪರವಾಗಿರಲಿದೆ. ರಾಜ್ಯದ ಜನರಿಗೆ ನಾವು ನೀಡಿರುವ ಯೋಜನೆಗಳನ್ನು ಕಂಡು ಬಿಜೆಪಿಯವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ಸಿಎಂ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದಾರೆ. ನ್ಯಾಯಕ್ಕಾಗಿ ನಾವು ಕಾನೂನು ಹೋರಾಟವನ್ನು ಮುಂದುವರೆಸುತ್ತೇವೆ. ನಮಗೆ ಈ ನೆಲದ ಕಾನೂನಿನ ಮೇಲೆ ಗೌರವವಿದೆ. ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಮಾತನಾಡಿದರು.