#Exclusive NewsTop Newsಫ್ರೀಡಂ ಟಿವಿ ವಿಶೇಷವಿಶೇಷವೈರಲ್ ನ್ಯೂಸ್ಶಿಕ್ಷಣಸುದ್ದಿ

ಕಲಬುರಗಿಯಲ್ಲಿ ಹೆಚ್ಚಾದ ಪೋಕ್ಸೊ ಪ್ರಕರಣಗಳು!

ಕಲಬುರಗಿ: ಕಳೆದ ಎರಡು  ವರ್ಷಗಳಿಂದ ಕಲಬುರಗಿ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಕಂಡುಬರುತ್ತಿವೆ.ಅಧಿಕೃತ ದಾಖಲೆಗಳ ಪ್ರಕಾರ, 2022-23ರ ಅವಧಿಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ 81 ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳು ಪ್ರಸಕ್ತ ವರ್ಷದಲ್ಲಿ ಹೆಚ್ಚಾಗಿವೆ. 2023-2024ರಲ್ಲಿ 90 ಪ್ರಕರಣಗಳು ಬೆಳಕಿಗೆ ಬಂದಿವೆ. ಆಗಸ್ಟ್ 2024ರ ಅಂತ್ಯದ ವೇಳೆಗೆ, 60 ಪ್ರಕರಣಗಳು ಈಗಾಗಲೇ ದಾಖಲಾಗಿವೆ. ಇದು ಆತಂಕ ಹೆಚ್ಚು ಮಾಡಿದೆ.

ಇನ್ನು, ಅಧಿಕಾರಿಗಳು ಈ ಕಾನೂನಿನ ಬಗ್ಗೆ  ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಘಟನೆಗಳನ್ನು ತಡೆಯಲು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ನಿಯಂತ್ರಿಸಲು ಪೋಕ್ಸೋ ಕಾಯ್ದೆಯನ್ನು ತರಲಾಗಿದ್ದು, ಈ ಕಾಯ್ದೆಯಡಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದಲ್ಲಿ ಭಾಗಿಯಾಗಿರುವವರಿಗೆ ಶಿಕ್ಷೆಯಾಗಲಿದೆ.

ಹಲವು ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿದ್ದರೂ ಜಿಲ್ಲೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಅನೇಕ ಸಂದರ್ಭಗಳಲ್ಲಿ, ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದಲೇ ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ವರದಿಗಳೇ ಹೆಚ್ಚು.

ಘಟನೆ ಸಂಬಂಧ ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ  ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಪೊಲೀಸರು, ಎನ್‌ಜಿಒಗಳೊಂದಿಗೆ ಸೇರಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರು ಸಹ ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಥೋಡ್ ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಧಿಕಾರಿಗಳ ಜೊತೆ ಪಾಲಕರು ಕೈಜೋಡಿಸಬೇಕಾದ ಅಗತ್ಯ ಇದೆ ಎಂದು ತಿಳಿಸಿದರು.

Comments (0)

Your email address will not be published. Required fields are marked *

Back to top button