ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ನಿಯೋಜಿತ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಇಂದು ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಖಿಲೇಶ್ ಯಾದವ್, ಪ್ರಕಾಶ್ ಕಾರಟ್, ಸುಪ್ರಿಯಾ ಸುಳೆ ಮತ್ತು ಕನಿಮೊಳಿ ಸೇರಿದಂತೆ ಇಂಡಿಯಾ ಕೂಟದ ನಾಯಕರು ಶ್ರೀನಗರಕ್ಕೆ ಆಗಮಿಸಿದ್ದಾರೆ.
ಪ್ರಮಾಣವಚನ ಸ್ವೀಕಾರ ಸಮಾರಂಭವು ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ 11:30ಕ್ಕೆ ನಡೆಯಲಿದ್ದು, ಒಮರ್ ಅಬ್ದುಲ್ಲಾ ಎರಡನೇ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಆರ್ಟಿಕಲ್ 370 ರದ್ಧತಿಯ ಬಳಿಕ ನಡೆದ ಚೊಚ್ಚಲ ವಿಧಾನಸಭೆಯಲ್ಲಿ ಗೆದ್ದ ನ್ಯಾಷನಲ್ ಕಾನ್ಫರೆನ್ಸ್‌ನ ಮುಖ್ಯಸ್ಥ ಒಮರ್ ಅಬ್ದುಲ್ಲಾ ಮೊದಲ ಮುಖ್ಯಮಂತ್ರಿಯಾಗಿ ಸ್ಥಾನಕ್ಕೇರಲಿದ್ದಾರೆ. ಇದಕ್ಕೂ ಮುನ್ನ 2009-2014 ರಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಬುಧವಾರ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಜನರಲ್ ಮನೋಜ್ ಸಿನ್ಹಾ ಪ್ರಮಾಣ ವಚನ ಬೋಧಿಸಲಿದ್ದಾರೆ.
Was pleased to receive the Principal Secretary to LG Manoj Sinha ji. He handed over a letter from the @OfficeOfLGJandK inviting me to form the next government in J&K. pic.twitter.com/D2OeFJwlKi
— Omar Abdullah (@OmarAbdullah) October 14, 2024
ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಎಸ್‌ಪಿ ನಾಯಕ ಅಖಿಲೇಶ್ ಯಾದವ್, ಆಪ್ ಮುಖಸ್ಥ ಅರವಿಂದ್ ಕೇಜ್ರಿವಾಲ್ ಭಾಗಿಯಾಗಲಿದ್ದಾರೆ. ಕಾರ್ಯಕ್ರಮಕ್ಕೆ ಹೆಚ್ಚು ವಿಐಪಿಗಳು ಆಗಮಿಸುತ್ತಿರುವ ಹಿನ್ನೆಲೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಎನ್‌ಸಿ ಪಕ್ಷವು ಒಟ್ಟು 42, ಕಾಂಗ್ರೆಸ್ 6 ಹಾಗೂ ಬಿಜೆಪಿ 27 ಸ್ಥಾನಗಳನ್ನು ಪಡೆದುಕೊಂಡಿತ್ತು.


