ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸೋಮವಾರ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ನ್ಯಾಯಮೂರ್ತಿ ಖನ್ನಾ ಅವರು 51 ನೇ ಸಿಜೆಐ ಆಗಿದ್ದು, ಸುಮಾರು 6 ತಿಂಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.
ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ, ಅವರು 370 ನೇ ವಿಧಿ ರದ್ಧತಿ, ವ್ಯಭಿಚಾರದ ಅಪರಾಧೀಕರಣ, ಚುನಾವಣಾ ಬಾಂಡ್‌ಗಳ ಯೋಜನೆ, ಇವಿಎಂ-ವಿವಿಪ್ಯಾಟ್ ಟ್ಯಾಲಿ ಇತ್ಯಾದಿಗಳ ಮಹತ್ವದ ತೀರ್ಪುಗಳ ಭಾಗವಾಗಿದ್ದಾರೆ. ಹಾಲಿ ಸಿಜೆಐ ಡಿ.ವೈ. ಚಂದ್ರಚೂಡ್ ಅವರು ಖನ್ನಾ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಕಳೆದ ತಿಂಗಳು ಶಿಫಾರಸ್ಸು ಮಾಡಿದ ನಂತರ ಅಕ್ಟೋಬರ್ 24 ರಂದು ಕೇಂದ್ರ ಸರ್ಕಾರ ಅವರನ್ನು ಅತ್ಯುನ್ನತ ನ್ಯಾಯಾಂಗ ಕಚೇರಿಗೆ ನೇಮಕ ಮಾಡಿತ್ತು
ನವೆಂಬರ್ 11 ರಿಂದ ಜಾರಿಗೆ ಬರುವಂತೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನೇಮಿಸಲು ರಾಷ್ಟ್ರಪತಿಗಳು ಸಂತೋಷಪಟ್ಟಿದ್ದಾರೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.


