ಹಾವೇರಿ: ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ. ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶಿಲ್ದಾರ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಮಧ್ಯರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಮನೋಹರ್ ತಹಶಿಲ್ದಾರ ನಾಲ್ಕು ಜನ ಪುತ್ರರು ಇಬ್ಬರು ಪುತ್ರಿಯರು ಇದ್ದಾರೆ.
ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಾಮರಾಜಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತರು ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬಲಿಜ ಸಮುದಾಯಕ್ಕೆ ಸೇರಿರುವ ಮನೋಹರ್ ತಹಶೀಲ್ದಾರ್ ಬಿಇ ಮೆಕ್ಯಾನಿಕಲ್ ಪದವೀಧರರು. 1978ರಲ್ಲಿ ಮೊದಲ ಬಾರಿಗೆ ಹಾನಗಲ್ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು, ಬಳಿಕ ಅವರು 1989, 1999, 2013 ಸೇರಿ 4 ಬಾರಿ ಗೆಲುವು ಸಾಧಿಸಿದ್ದಾರೆ.
ಈ ಹಿಂದೆ ಎಸ್,ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತಹಶೀಲ್ದಾರ್ ಅವರು ವಿಧಾನಸಭೆ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶೀಲ್ದಾರ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ್ದಕ್ಕೆ ಬೇಸತ್ತ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಆ ಬಳಿಕ ಲೋಕಾಸಭಾ ಚುನಾವಣೆಯ ವೇಳೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು.
ಸಾರ್ವಜನಿಕರ ದರ್ಶನಕ್ಕೆ ಅವಾಕಶ
ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅವರ ಮೃತದೇಹದ ಅಂತಿಮ ದರ್ಶನಕ್ಕೆ ಇಂದು ಮಧ್ಯಾಹ್ನ 12 ಗಂಟೆಯಿಂದ ಹಾನಗಲ್ಲ ಪಟ್ಟಣದ ಎನ್ಸಿಜೆಸಿ ಮಹಾವಿದ್ಯಾಲಯದ ಆವರಣದಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.ಬಳಿಕ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ.
ಮಾಜಿ ಸಿಎಂ ಬೊಮ್ಮಾಯಿ ಸಂತಾಪ
”ಮಾಜಿ ಸಚಿವ, ಹಾನಗಲ್ ಕ್ಷೇತ್ರದ ಆರು ಬಾರಿಯ ಶಾಸಕ ಮನೋಹರ್ ತಹಶೀಲ್ದಾರ್ ಅವರು ನಿಧನರಾದ ವಿಷಯ ತಿಳಿದು ತುಂಬಾ ದುಃಖಿತನಾಗಿದ್ದೇನೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ನಾಯಕತ್ವ ಮೆಚ್ಚಿ ಬಿಜೆಪಿ ಸೇರಿದ್ದರು. ಬಳಿಕ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವಿಗಾಗಿ ಶ್ರಮಿಸಿದ್ದರು. ಅವರ ನಿಧನದಿಂದ ರಾಜ್ಯವು ಒಬ್ಬ ಅನುಭವಿ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ, ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮಾಜಿ ಸಿಎಂ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.