ಹುಬ್ಬಳ್ಳಿ: ಬಿವಿಬಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನಿ ಅರ್ಜಿಯನ್ನು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.
2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ನಡೆಸಿದ್ದು, ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಇಷ್ಟು ದಿನಗಳ ಕಾಲ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗುತ್ತಿದ್ದ ಫಯಾಜ್ನನ್ನು ಆಗಸ್ಟ್ 6 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚಿಸಿದೆ.
ಇನ್ನು ಹಂತಕ ಫಯಾಜ್ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್ನ ಆದೇಶವನ್ನು ನೇಹಾ ಹಿರೇಮಠ ಕುಟುಂಬಸ್ಥರು ಸ್ವಾಗತಿಸಿ ಸಂತಸ ವ್ಯಕ್ತಪಡಿಸಿದ್ದಾರೆ.
ಏಪ್ರಿಲ್ 18, 2024ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ 24 ವರ್ಷದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಹತ್ಯೆ ನಡೆದಿತ್ತು. 10ಕ್ಕೂ ಹೆಚ್ಚು ಬಾರಿ ಬರ್ಬರವಾಗಿ ಇರಿದು ಕೊಲೆ ಮಾಡಲಾಗಿತ್ತು. ಪ್ರಕರಣದ ಆರೋಪಿ ಬೆಳಗಾವಿ ಜಿಲ್ಲೆಯ ಫಯಾಜ್ (24) ಎಂಬಾತನನ್ನು ಬಂಧಿಸಲಾಗಿತ್ತು. ಪ್ರಕರಣ ರಾಜ್ಯಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಘಟನೆ ಖಂಡಿಸಿ ಸಾವಿರಾರು ವಿದ್ಯಾರ್ಥಿಗಳು ಮತ್ತು ನಾಗರಿಕರು ಪ್ರತಿಭಟನೆ ನಡೆಸಿದ್ದರು.


