ಡೆಹ್ರಾಡೂನ್: ಉತ್ತರಾಖಂಡದ ರುದ್ರಪ್ರಯಾಗ ಮತ್ತು ಚಮೋಲಿ ಜಿಲ್ಲೆಗಳಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಈ ಘಟನೆಯಲ್ಲಿ ಹಲವು ಮಂದಿ ನಾಪ್ತತೆಯಾಗಿರುವ ಶಂಕೆ ವ್ಯಕ್ತವಾಗಿದೆ.. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ದೇವಲ್‌ನ ಮೊಪಾಟಾ ಪ್ರದೇಶದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. ಇನ್ನೂ 15ಕ್ಕೂ ಹೆಚ್ಚು ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ. ರುದ್ರಪ್ರಯಾಗ ಜಿಲ್ಲೆಯಲ್ಲಿ ಅಲಕನಂದಾ ಮತ್ತು ಮಂದಾಕಿನಿ ನದಿಗಳ ಸಂಗಮದಲ್ಲಿ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದ್ದು, ಹನುಮಾನ್ ದೇವಾಲಯ ಮುಳುಗಡೆಯಾಗಿದೆ
ಶ್ರೀನಗರ ಮತ್ತು ರುದ್ರಪ್ರಯಾಗ ನಡುವಿನ ಬದರಿನಾಥ ಹೆದ್ದಾರಿ ಮುಳುಗಡೆಯಾದ ಹಿನ್ನೆಲೆ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಾಗಿ ಯಾತ್ರಿಕರನ್ನು ಪರ್ಯಾಯ ಮಾರ್ಗಗಳ ಮೂಲಕ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಭದ್ರತಾ ದೃಷ್ಟಿಯಿಂದ ಅಲ್ಲಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಘಟನೆ ಕುರಿತು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ರುದ್ರಪ್ರಯಾಗ ಮತ್ತು ಚಮೋಲಿ ಜಿಲ್ಲೆಗಳಲ್ಲಿ ಮೇಘಸ್ಫೋಟ ಮತ್ತು ಅವಶೇಷಗಳ ಹರಿವಿನಿಂದ ಅನೇಕ ಕುಟುಂಬಗಳು ಸಿಲುಕಿಕೊಂಡಿವೆ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ವೇಗವಾಗಿ ನಡೆಯುತ್ತಿವೆ ಮತ್ತು ರಕ್ಷಣಾ ಕಾರ್ಯಕ್ಕೆ ಅಗತ್ಯವಿರುವ ಎಲ್ಲಾ ಸೂಚನೆಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು.