Wednesday, April 30, 2025
30.3 C
Bengaluru
LIVE
ಮನೆರಾಜ್ಯಸಿರಿಧಾನ್ಯಗಳ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿ: ಕೆ.ಹೆಚ್.ಮುನಿಯಪ್ಪ

ಸಿರಿಧಾನ್ಯಗಳ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿ: ಕೆ.ಹೆಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ : ಪ್ರತಿಯೊಬ್ಬ ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯ, ಪೂರಕವಾದ ಆಹಾರ ಹಾಗೂ ಗುಣಮಟ್ಟದ ಆಹಾರ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ ಆಗುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.


ಕೃಷಿ ಇಲಾಖೆ ವತಿಯಿಂದ ಸಾವಯವ ಮತ್ತು ಸಿರಿಧಾನ್ಯಗಳ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯಗಳ ಹಬ್ಬ ಮತ್ತು ಕಿಸಾನ್ ಮೇಳ-2024 ಕಾರ್ಯಕ್ರಮವನ್ನು ಉಧ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದಿನಗಳಲ್ಲಿ ಜನರು ಫಾಸ್ಟ್ ಫುಡ್ ಮೊರೆ ಹೋಗುತ್ತಿದ್ದಾರೆ. ಇದರಿಂದ ಆರೋಗ್ಯ ಕೆಡುತ್ತಿದೆ. ನಾವು ತಿನ್ನುವ ಆಹಾರ ಗುಣಮಟ್ಟದಾಗಿರಬೇಕು. ಸಿರಿಧಾನ್ಯಗಳು ಹೆಚ್ಚು ಹೆಚ್ಚು ಬಳಸುವುದರಿಂದ ಪೌಷ್ಟಿಕಾಂಶವುಳ್ಳ ಆಹಾರ ನಮ್ಮ ದೇಹ ಸೇರಿ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಸಚಿವರು ಹೇಳಿದರು.


ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಎತ್ತಿನ ಹೊಳೆ ನೀರು, ಹೆಚ್.ಎನ್ ವ್ಯಾಲಿ ನೀರು, ಮೂರನೇ ಹಂತದ ಶುದ್ಧೀಕರಣ ಕೆ.ಸಿ ವ್ಯಾಲಿ ನೀರನ್ನು ತರಲಾಗುವುದು. ಕೃಷಿಗೆ ಹೆಚ್ಚಿನ ಉತ್ತೇಜನ ನೀಡಿ ಗುಣಮಟ್ಟದ ಆಹಾರ ಬೆಳೆಯಲು ಪ್ರೋತ್ಸಾಹಿಸಲಾಗುವುದು ಎಂದು ಅವರು ಹೇಳಿದರು.

ಚಿಕ್ಕಬಳ್ಳಾಪುರ ಲೋಕಸಭಾ ಸಂಸದರಾದ ಬಿ.ಎನ್ ಬಚ್ಚೇಗೌಡ ಅವರು ಮಾತನಾಡಿ ಸಿರಿಧಾನ್ಯಗಳನ್ನು ಬೆಳೆಯಲು ರೈತರಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ, ಲಾಭದಾಯಕ ಬೆಳೆಗಳ ಬಗ್ಗೆ ರೈತರು ಹೆಚ್ಚಿನ ಗಮನವಹಿಸುತ್ತಾರೆ, ಸರ್ಕಾರದಿಂದ ವಿವಿಧ ಯೋಜನೆಗಳ ಮೂಲಕ ಮಾಹಿತಿ ನೀಡಿ ಸಿರಿಧಾನ್ಯಗಳಗಳನ್ನು ಬೆಳೆಯಲು ಪ್ರೋತ್ಸಾಹಿಸಿ ಬೆಂಬಲಿಸಬೇಕು ಎಂದು ಹೇಳಿದರು.


ಕೃಷಿ ಇಲಾಖೆಯ ವಿವಿಧ ಯೋಜನೆಗಳ ಸೌಲಭ್ಯಗಳನ್ನು ದೇವನಹಳ್ಳಿ ತಾಲ್ಲೂಕಿನ ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು. ಕೃಷಿ ಇಲಾಖೆ ವತಿಯಿಂದ ಆಯ್ದ ರೈತರಿಗೆ ಉದಯೋನ್ಮುಖ ಕೃಷಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಮೇಳದಲ್ಲಿ ರೈತರಿಗೆ ಅವಶ್ಯವಿರುವ ಬೇಸಾಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಕೃಷಿ ಇಲಾಖೆ ವತಿಯಿಂದ ನೀಡಲಾಯಿತು, ವಿವಿಧ ತಳಿಯ ಕೃಷಿ ಉತ್ಪನ್ನಗಳು, ಯಂತ್ರೋಪಕರಣಗಳ ವಸ್ತು ಪ್ರದರ್ಶನ ಏರ್ಪಡಿಲಾಗಿತ್ತು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಲಲಿತ ರೆಡ್ಡಿ, ಉಪ ನಿರ್ದೇಶಕಿ ಗಾಯಿತ್ರಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ, ರೇಷ್ಮೆ ಇಲಾಖೆ ನಿರ್ದೇಶಕ ಪ್ರಭಾಕರ್, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಜಗದೀಶ್ ಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ರವಿಕುಮಾರ್, ಜನಪ್ರತಿನಿಧಿಗಳು, ಮುಖಂಡರು ಸೇರಿದಂತೆ ಜಿಲ್ಲೆಯ ರೈತರು, ಸಾರ್ವಜನಿಕರು ಪಾಲ್ಗೊಂಡಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments