ಬೆಂಗಳೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಬಾನು ಮುಷ್ತಾಕ್ ಅವರ ಆಯ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ವಜಾಗೊಳಿಸಿದೆ. ಬಿಜೆಪಿ ನಾಯಕ ಪ್ರತಾಪ್ ಸಿಂಹ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ಪೀಠ, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ, ಹೀಗಾಗಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದಿದೆ.
ಇನ್ನು ಪ್ರತಾಪ್ ಸಿಂಹ ಮಾತ್ರವಲ್ಲದೆ ಟಿ. ಗಿರೀಶ್ ಕುಮಾರ್, ಹೆಚ್.ಎಸ್.ಗೌರವ್ ಎಂಬವರೂ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅವುಗಳನ್ನೂ ಕೋರ್ಟ್ ವಜಾಗೊಳಿಸಿದೆ.
ಸರ್ಕಾರದ ಪರ ವಾದ ಮಂಡಿಸಿದ ಎಜಿ ಶಶಿಕಿರಣ್ ಶೆಟ್ಟಿ, ಅರ್ಜಿದಾರರಿಗೆ ದಂಡ ವಿಧಿಸಬೇಕೆಂದು ಆಗ್ರಹಿಸಿದರು. ದಸರಾ ಉದ್ಘಾಟಿಸಿದ ನಿಸಾರ್ ಅಹಮದ್ ಜೊತೆಗೆ ಪ್ರತಾಪ್ ಸಿಂಹ ಇದ್ದರು. ಆಗ ವಿರೋಧಿಸದೇ, ಈಗ ಮುಸ್ಲಿಂ ಮಹಿಳೆ ಎಂಬ ಕಾರಣಕ್ಕೆ ವಿರೋಧಿಸುತ್ತಿದ್ದಾರೆ ಎಂದರು.


