ಹೈದರಾಬಾದ್: ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ..
ಹಲವರು ಗಾಯಗೊಂಡಿದ್ದಾರೆ.. ಏಕಾದಶಿ ಪ್ರಯುಕ್ತ ಪ್ರಾರ್ಥನೆ ಸಲ್ಲಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಸಮಯದಲ್ಲಿ ದುರಂತ ಸಂಭವಿಸಿದೆ ಎಂದು ಆಂಧ್ರ ಪ್ರದೇಶ ಸಿಎಂ ಕಚೇರಿಯ ಪ್ರಕಟಣೆ ತಿಳಿಸಿದೆ. ದೇವಸ್ಥಾನದ ಆವರಣದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಘಾತ ವ್ಯಕ್ತಪಡಿಸಿದ್ದು, ಭಕ್ತರ ಸಾವು ಹೃದಯವಿದ್ರಾವಕ ಎಂದು ವಿಷಾದಿಸಿದ್ದಾರೆ.
ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವಂತೆ ಸ್ಥಳೀಯ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳನ್ನು ವಿನಂತಿಸಿದ್ದೇನೆ’ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.
ಇನ್ನು ಪರಿಸ್ಥಿತಿ ನಿಯಂತ್ರಿಸಲು ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಪೊಲೀಸ್ ತಂಡಗಳು ಮತ್ತು ತುರ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಕೃಷಿ ಸಚಿವ ಕೆ. ಅಚ್ಚನ್ನಾಯ್ಡು ದೇವಾಲಯಕ್ಕೆ ತಲುಪಿ ಪರಿಸ್ಥಿತಿಯನ್ನು ನಿಭಾಯಿಸಲು ದೇವಾಲಯದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಜನಸಂದಣಿಯನ್ನು ನಿರ್ವಹಿಸಲು ಮತ್ತು ಪರಿಹಾರ ಕಾರ್ಯಗಳಲ್ಲಿ ಸಹಾಯ ಮಾಡಲು ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.


