ಹೈದರಾಬಾದ್: ಸರ್ಕಾರಿ ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಮುಗುಚಿ ಬಿದ್ದ ಪರಿಣಾಮ ಬಸ್ನಲ್ಲಿದ್ದ 17 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ತಾಲೂಕಿನ ಮಿರ್ಜಾಗೂಡ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಬಸ್‌ನಲ್ಲಿ ಸುಮಾರು 70 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಟಿಪ್ಪರ್ ಪಲ್ಟಿಯಾದ ಪರಿಣಾಮ ಜಲ್ಲಿಕಲ್ಲಿನ ಕೆಳಗೆ ಪ್ರಯಾಣಿಕರು ಸಿಲುಕಿಕೊಂಡಿದ್ದರು. ಘಟನೆಯಲ್ಲಿ 17 ಮಂದಿ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಚೆವೆಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಘಟನಾ ಸ್ಥಳದಲ್ಲಿ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಬಸ್ ಮೇಲೆ ಜಲ್ಲಿಕಲ್ಲುಗಳಿಂದ ತುಂಬಿದ್ದ ಟಿಪ್ಪರ್ ಬಿದ್ದು ಬಸ್‌ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಿಪ್ಪರ್ ಚಾಲಕನ ಅತಿವೇಗದ ಚಾಲನೆಯಿಂದ ಘಟನೆ ಸಂಭವಿಸಿದೆ. ಅಪಘಾತದ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಬೇಸರ ವ್ಯಕ್ತಪಡಿಸಿದ್ದು, ಗಾಯಾಳುಗಳು ಮತ್ತು ಮೃತ ಪ್ರಯಾಣಿಕರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಬೇಕೆಂದು ಸೂಚಿಸಿದ್ದಾರೆ.


