
ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ನಡೆದ ಬ್ಯಾನರ್ ವಿವಾದದಿಂದ ಉಂಟಾದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಗುಂಡೇಟಿಗೆ ಸಾವನ್ನಪ್ಪಿದ್ದರು. ಬ್ಯಾನರ್ ಕಿತ್ತಾಟದ ವಿಚಾರ ರಾಜ್ಯ ರಾಜಕೀಯದಲ್ಲಿ ಬೃಹತ್ ಸಂಘರ್ಷವಾಗಿ ಮಾರ್ಪಟ್ಟಿದೆ.
ಇಂದು ಮೃತ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಾಯಕರು ಹುಸೇನ್ ನಗರದಲ್ಲಿರುವ ರಾಜಶೇಖರ್ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದರು. ಶಾಸಕ ಗಾಲಿ ಜನಾರ್ಧನ ರೆಡ್ಡಿ, ಮಾಜಿ ಸಚಿವ ಬಿ. ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಸಹ ಭಾಗಿಯಾಗಿದ್ದರು. ಅರುಣಾ ಲಕ್ಷ್ಮಿ ಮೃತ ಕುಟುಂಬಕ್ಕೆ 10 ಲಕ್ಷ ರೂಪಾಯಿಗಳ ಚೆಕ್ ವಿತರಿಸಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಘಟನೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಜನವರಿ 1ರಂದು ವಾಲ್ಮೀಕಿ ಮಹರ್ಷಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಅಂಗವಾಗಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿ ಗಲಾಟೆಯಾಗಿತ್ತು. ಈ ಸಮಯದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿದ್ದರು.
ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ನಿವಾಸದ ಬಳಿ ಬ್ಯಾನರ್ ವಿಚಾರಕ್ಕೆ ನಡೆದ ಈ ಗಲಭೆಯಲ್ಲಿ ಕಲ್ಲು ತೂರಾಟ, ಫೈರಿಂಗ್ ನಡೆದು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಸಾವನ್ನಪ್ಪಿದ್ದರು. ಪೊಲೀಸರು ಎರಡೂ ಪಕ್ಷದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಹಲವು ಮಂದಿಯನ್ನು ಬಂಧಿಸಲಾಗಿದೆ. ಇದೀಗ ಮೃತ ರಾಜಶೇಖರ್ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ ಸಾಂತ್ವನ ಹೇಳಿ ಪರಿಹಾರ ನೀಡಿದ್ದಾರೆ.


