Freedom TV

ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಸಿರವಾರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ, ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರನ್ನು ದೇವದುರ್ಗ ತಾಲ್ಲೂಕಿನ ಮರಗಮದಿಬ್ಬಿ ತಾಂಡದ ನಿವಾಸಿ ಶಾಂತಪ್ಪ (26) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಖಾಸಗಿ ಶಾಲೆಯ ಶಿಕ್ಷಕನಾಗಿದ್ದ ಶಾಂತಪ್ಪ, ಇಂದು ಅರಕೇರಾದಿಂದ ಸಿರವಾರ ಕಡೆಗೆ ಸ್ನೇಹಿತರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಸಿರವಾರ ಕ್ರಾಸ್ ಬಳಿ ತಲುಪಿದಾಗ ಅತಿ ವೇಗ ಅಥವಾ ತಾಂತ್ರಿಕ ಕಾರಣದಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಹಲವು ಬಾರಿ ಪಲ್ಟಿ ಹೊಡೆದಿದೆ.

ಕಾರಿನಲ್ಲಿದ್ದ ಶಾಂತಪ್ಪ ಅವರಿಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿದ್ದರಿಂದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಉಳಿದ ಇಬ್ಬರು ಪ್ರಯಾಣಿಕರಾದ ಮಾರೆಪ್ಪ ಹಾಗೂ ಶಿನು ಪವಾರ್ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Comments (0)

Your email address will not be published. Required fields are marked *

Back to top button