ದೇಶ/ವಿದೇಶಸುದ್ದಿ

ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಭೀಕರ ಎನ್‌ಕೌಂಟರ್: 8 ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಭೀಕರ ಗುಂಡಿನ ಚಕಮಕಿ ಮುಂದುವರೆದಿದೆ. ಪಾಕಿಸ್ತಾನ ಬೆಂಬಲಿತ ಜೈಶ್-ಇ-ಮೊಹಮ್ಮದ್ ಸಂಘಟನೆಯ ಉಗ್ರರನ್ನು ಸದೆಬಡಿಯಲು ನಡೆಸುತ್ತಿರುವ ಈ ಕಾರ್ಯಾಚರಣೆಯಲ್ಲಿ ಎಂಟು ಮಂದಿ ಯೋಧರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಕಿಶ್ತ್ವಾರ್ ಜಿಲ್ಲೆಯ ಸಿಂಗ್‌ಪೋರಾ ಮತ್ತು ಛಾತ್ರು ಭಾಗದ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಅಡಗುತಾಣದಲ್ಲಿದ್ದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ದಿಢೀರ್ ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಯೋಧರು ಇಡೀ ಪ್ರದೇಶವನ್ನು ಸುತ್ತುವರಿದು ಎನ್‌ಕೌಂಟರ್ ಆರಂಭಿಸಿದ್ದಾರೆ.

ಕಾರ್ಯಾಚರಣೆ ತೀವ್ರಗೊಳ್ಳುತ್ತಿದ್ದಂತೆ ಕಂಗೆಟ್ಟ ಉಗ್ರರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್‌ಗಳನ್ನು ಎಸೆದಿದ್ದಾರೆ. ಈ ಸ್ಫೋಟದಲ್ಲಿ ಎಂಟು ಮಂದಿ ಯೋಧರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹತ್ತಿರದ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಾಯಾಳುಗಳಿಗೆ ತೀವ್ರ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಅವರು ಪ್ರಾಣಾಪಾಯದಿಂದ ಹೊರಬಂದಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳದಲ್ಲಿ ಇಬ್ಬರಿಂದ ಮೂವರು ವಿದೇಶಿ ಮೂಲದ ಉಗ್ರರು ಅಡಗಿಕೊಂಡಿರುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಇವರು ಜೈಶ್-ಇ-ಮೊಹಮ್ಮದ್ ಸಂಘಟನೆಗೆ ಸೇರಿದವರಾಗಿದ್ದು, ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿದೆ. ದಟ್ಟ ಅರಣ್ಯ ಮತ್ತು ಪ್ರತಿಕೂಲ ಹವಾಮಾನದ ನಡುವೆಯೂ ಹೆಚ್ಚುವರಿ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಉಗ್ರರ ಸಂಹಾರಕ್ಕಾಗಿ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.

Comments (0)

Your email address will not be published. Required fields are marked *

Back to top button