ಹಾಸನ: ಜೆಡಿಎಸ್ ಪಕ್ಷದ ಇಪ್ಪತ್ತೈದು ವರ್ಷಗಳ ಸುದೀರ್ಘ ಪಯಣದ ಸ್ಮರಣಾರ್ಥವಾಗಿ ಇಂದು ಹಾಸನದ ಬೂವನಹಳ್ಳಿಯಲ್ಲಿ ‘ಬೆಳ್ಳಿ ಹಬ್ಬ’ ಹಾಗೂ ಬೃಹತ್ ‘ಜನತಾ ಸಮಾವೇಶ’ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ವಿರುದ್ಧ ಅಬ್ಬರಿಸಲು ದೇವೇಗೌಡರ ಕುಟುಂಬ ಸಮೇತ ದಳದ ನಾಯಕರು ರಣಕಹಳೆ ಊದಲಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ನೇತೃತ್ವದಲ್ಲಿ ಈ ಬೃಹತ್ ಕಾರ್ಯಕ್ರಮವಾಗಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜೆಡಿಎಸ್‌ನ ಎಲ್ಲಾ 19 ಶಾಸಕರು, ಸಂಸದರು, ಮಾಜಿ ಸಚಿವರು ಹಾಗೂ ರಾಜ್ಯದ ಮೂಲೆ ಮೂಲೆಗಳಿಂದ ಪ್ರಮುಖ ನಾಯಕರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.
ಬೂವನಹಳ್ಳಿಯ ಸಮಾವೇಶದಲ್ಲಿ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಬೆಂಬಲಿಗರು ಮತ್ತು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ. ಸಮಾವೇಶದ ಹಿನ್ನೆಲೆಯಲ್ಲಿ ಹಾಸನ ನಗರದಾದ್ಯಂತ ಜೆಡಿಎಸ್ ಬಾವುಟಗಳು, ಬಂಟಿಂಗ್ಸ್ ಹಾಗೂ ನಾಯಕರ ಬೃಹತ್ ಕಟೌಟ್‌ಗಳು ರಾರಾಜಿಸುತ್ತಿವೆ.
ಲಕ್ಷಾಂತರ ಸಂಖ್ಯೆಯಲ್ಲಿ ಜನ ಸೇರುತ್ತಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಂಡಿದೆ. ರಾಜ್ಯ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ನಡುವೆ ನಡೆಯುತ್ತಿರುವ ಈ ಸಮಾವೇಶವು ಭಾರೀ ಕುತೂಹಲ ಮೂಡಿಸಿದೆ. ಸರ್ಕಾರಕ್ಕೆ ಟಕ್ಕರ್ ನೀಡಲು ಹಾಗೂ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಈ ವೇದಿಕೆಯನ್ನು ಬಳಸಿಕೊಳ್ಳಲು ಜೆಡಿಎಸ್ ತಂತ್ರ ರೂಪಿಸಿದೆ.


