
ಬೆಂಗಳೂರು:ಅಂಜನಾಪುರ ನಿವಾಸಿಗಳಲ್ಲಿ ಚಿರತೆ ಭೀತಿ ಎದುರಾಗಿದೆ. ಅಂಜನಾಪುರ 7ನೇ ಬ್ಲಾಕ್ ವ್ಯಾಪ್ತಿಯಲ್ಲಿ ಚಿರತೆಯೊಂದು ಸಂಚರಿಸುತ್ತಿರುವುದು ದೃಢಪಟ್ಟಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಮಧ್ಯರಾತ್ರಿ ಸುಮಾರು 2 ಗಂಟೆಯ ಸಮಯದಲ್ಲಿ ಚಿರತೆಯು ರಸ್ತೆಯಲ್ಲಿ ರಾಜಾರೋಷವಾಗಿ ಓಡಾಡುತ್ತಿರುವುದು ಮನೆಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಾರ್ವಜನಿಕರ ನಿದ್ರೆ ಗೆಡಿಸಿವೆ. ಅಂಜನಾಪುರ ಬಡಾವಣೆಯು ತುರಹಳ್ಳಿ ಅರಣ್ಯ ಪ್ರದೇಶಕ್ಕೆ ತೀರಾ ಸಮೀಪದಲ್ಲಿರುವುದರಿಂದ, ಆಹಾರ ಅರಸಿ ಅರಣ್ಯದಿಂದಲೇ ಈ ಚಿರತೆ ಜನವಸತಿ ಪ್ರದೇಶಕ್ಕೆ ನುಗ್ಗಿರಬಹುದು ಎಂದು ಶಂಕಿಸಲಾಗಿದೆ.
ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಅರಣ್ಯ ಪ್ರದೇಶದ ಅಂಚಿನಲ್ಲಿರುವ ಬಡಾವಣೆಗಳಲ್ಲಿ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿದ್ದು, ಅರಣ್ಯ ಇಲಾಖೆ ಕೂಡಲೇ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆಹಿಡಿಯಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ. ಚಿರತೆ ಸಂಚಾರದ ಹಿನ್ನೆಲೆಯಲ್ಲಿ ರಾತ್ರಿ ವೇಳೆ ಮನೆಯಿಂದ ಹೊರಬರುವಾಗ ಎಚ್ಚರಿಕೆ ವಹಿಸುವಂತೆ ಜನರಿಗೆ ಸೂಚಿಸಲಾಗಿದೆ.




