ವಿಜಯನಗರ: ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ಕೇರಳದಿಂದ ಹಂಪಿಗೆ ಪ್ರವಾಸಕ್ಕೆಂದು ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಮಿನಿ ಬಸ್ ಆಕಸ್ಮಿಕವಾಗಿ ಪಲ್ಟಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ ರಸ್ತೆಯ ಡಿವೈಡರ್ಗೆ ಭೀಕರವಾಗಿ ಡಿಕ್ಕಿ ಹೊಡೆದಿದ್ದು, ಈ ಅಪಘಾತದ ರಭಸಕ್ಕೆ ಬಸ್ ರಸ್ತೆಯಲ್ಲೇ ಉರುಳಿ ಬಿದ್ದಿದೆ. ಈ ದುರ್ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಹಾಗೂ ಒಬ್ಬ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನದ ಸಂಗತಿಯಾಗಿದೆ. ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಕೂಡ್ಲಿಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


