ಜಿಲ್ಲೆಸುದ್ದಿ

ಖಾಸಗಿ ಬಸ್‌ನಲ್ಲಿ ಅಗ್ನಿ ಅವಘಡ; ಬೆಂಕಿಯ ಜ್ವಾಲೆಗೆ ದಂಗಾದ ಚಂದ್ರಾಲೇಔಟ್ ಜನತೆ

ಬೆಂಗಳೂರು: ಚಂದ್ರಾಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ನಿಲ್ಲಿಸಿದ್ದ ಖಾಸಗಿ ಬಸ್‌ವೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ, ಬಸ್‌ನ ಅಕ್ಕಪಕ್ಕದಲ್ಲಿ ನಿಲ್ಲಿಸಲಾಗಿದ್ದ ಇತರ ವಾಹನಗಳಿಗೂ ಜ್ವಾಲೆ ಹಬ್ಬಿದ್ದು, ಅವುಗಳಿಗೂ ಭಾಗಶಃ ಹಾನಿಯಾಗಿದೆ.

ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ ಎಂಬುದು ಸದ್ಯದ ಸಮಾಧಾನಕರ ವಿಷಯ. ಇದರಿಂದಾಗಿ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದಂತಾಗಿದೆ. ಬಸ್‌ನಿಂದ ದಟ್ಟವಾದ ಹೊಗೆ ಮತ್ತು ಬೆಂಕಿ ಬರುತ್ತಿರುವುದನ್ನು ಕಂಡ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಬಸ್ ಹೊತ್ತಿ ಉರಿಯಲು ನಿಖರವಾದ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಬ್ಯಾಟರಿಯಲ್ಲಿನ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆಯೇ ಅಥವಾ ಡೀಸೆಲ್ ಟ್ಯಾಂಕ್ ಸೋರಿಕೆಯಾಗಿ ದುರಂತ ಸಂಭವಿಸಿದೆಯೇ ಎಂಬ ಅನುಮಾನ ಮೂಡಿದೆ. ಇದರ ಜೊತೆಗೆ, ಯಾರಾದರೂ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿದ್ದಾರೆಯೇ ಎಂಬ ಆಯಾಮದಲ್ಲೂ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Comments (0)

Your email address will not be published. Required fields are marked *

Back to top button