ಜಿಲ್ಲೆಸುದ್ದಿ

ಅಂಕೋಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ; 24 ಮಂದಿಗೆ ಗಾಯ

ಉತ್ತರ ಕನ್ನಡ: ಅಂಕೋಲ ತಾಲೂಕಿನ ಸುಂಕಸಾಳ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಎರಡು ಖಾಸಗಿ ಬಸ್ಸುಗಳು ಹಾಗೂ ಲಾರಿಯ ನಡುವೆ ನಡೆದ ಈ ಡಿಕ್ಕಿಯಲ್ಲಿ ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 24 ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿದ್ದ ಲಾರಿ ಹಾಗೂ ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಸಿಬರ್ಡ್ ಸಂಸ್ಥೆಯ ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಈ ವೇಳೆ ಸಿಬರ್ಡ್ ಬಸ್ಸಿನ ಹಿಂಬದಿಯಲ್ಲೇ ಬರುತ್ತಿದ್ದ ಗಣೇಶ್ ಟ್ರಾವೆಲ್ಸ್ ಬಸ್ ಸಹ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.

ಈ ಅಪಘಾತದ ತೀವ್ರತೆಗೆ ಲಾರಿ ರಸ್ತೆಯಲ್ಲೇ ಪಲ್ಟಿಯಾಗಿದ್ದು, ಲಾರಿ ಚಾಲಕನ ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಗೊಂಡವರಲ್ಲಿ ಹಂಪಿಯಿಂದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ 12 ವಿದೇಶಿ ಪ್ರಜೆಗಳೂ ಸೇರಿದ್ದಾರೆ . ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಮತ್ತು ಪೊಲೀಸರು ಗಾಯಾಳುಗಳನ್ನು ಅಂಕೋಲ ಹಾಗೂ ಕಾರವಾರದ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಅಪಘಾತದ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡು ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ತದನಂತರ ಪೋಲಿಸರು ಸ್ಥಳಕ್ಕೆ ಆಗಮಿಸಿ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Comments (0)

Your email address will not be published. Required fields are marked *

Back to top button