Top Newsಜಿಲ್ಲೆವೈರಲ್ ನ್ಯೂಸ್ಸುದ್ದಿ

ಬಾಗಲಕೋಟೆಯಲ್ಲಿ ಹೈಟೆನ್ಷನ್; ನಿಷೇಧಾಜ್ಞೆ ನಡುವೆಯೇ ಕಲ್ಲು ತೂರಾಟ

ಬಾಗಲಕೋಟೆ: ಕಿಲ್ಲಾ ಓಣಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಸಹ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ನಡೆದಿದ್ದ ಕಲ್ಲು ತೂರಾಟವನ್ನು ಖಂಡಿಸಿ ಕೊತ್ತಲೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಭೆ ಸೇರಿದ್ದರು. ಕೇವಲ ಎಂಟು ಮಂದಿಯಲ್ಲದೆ, ಘಟನೆಯಲ್ಲಿ ಭಾಗಿಯಾದ ಎಲ್ಲಾ ಯುವಕರನ್ನು ತಕ್ಷಣ ಬಂಧಿಸಬೇಕು ಎಂದು ಸಭೆಯಲ್ಲಿ ಆಗ್ರಹಿಸಲಾಯಿತು.

ಸಭೆಯ ನಂತರ ಕಾರ್ಯಕರ್ತರು ನಗರದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲು ಮುಂದಾದಾಗ ಪೊಲೀಸರು ಅವರನ್ನು ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ವಾಗ್ವಾದ ನಡೆದಿದೆ. ಆರೋಪಿಗಳ ಬಂಧನವಾಗದಿದ್ದರೆ ಬಂದ್ ಕೈಬಿಡುವುದಿಲ್ಲ ಎಂದು ಕಾರ್ಯಕರ್ತರು ಪಟ್ಟು ಹಿಡಿದರು. ಈ ಗೊಂದಲದ ನಡುವೆಯೇ ಉದ್ರಿಕ್ತ ಗುಂಪು ಕೆಲವು ಮನೆಗಳು, ಮೀನು ಮಾರುಕಟ್ಟೆ ಮತ್ತು ತರಕಾರಿ ಮಾರುಕಟ್ಟೆಯ ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದೆ.

ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಪೊಲೀಸರು ತಕ್ಷಣವೇ ಲಾಠಿ ಚಾರ್ಜ್ ನಡೆಸಿ ಉದ್ರಿಕ್ತರನ್ನು ಚದುರಿಸಿದ್ದಾರೆ. ಸದ್ಯ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಶಾಂತಿ ಕಾಪಾಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button