ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನವನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರವು ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಈ ಕ್ರಮ ಕೈಗೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು, ರಾಜ್ಯದ ಅತಿದೊಡ್ಡ ಹಗರಣವಾದ ‘ಮುಡಾ’ ನಿವೇಶನ ಲೂಟಿಯ ವಿರುದ್ಧ ದನಿ ಎತ್ತಿದವರನ್ನು ಹತ್ತಿಕ್ಕಲು ಸರ್ಕಾರ ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ,ಮುಖ್ಯಮಂತ್ರಿಗಳ ವಿರುದ್ಧ ಹಾಗೂ ಹಗರಣದಲ್ಲಿ ಭಾಗಿಯಾದ ಪ್ರಭಾವಿ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆಂಬ ಕಾರಣಕ್ಕೆ ಸ್ನೇಹಮಯಿ ಕೃಷ್ಣ ಅವರ ಮೇಲೆ ಸುಳ್ಳು ದೂರುಗಳನ್ನು ಹೊರಿಸಲಾಗುತ್ತಿದೆ , ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೇ ಕೋರ್ಟ್ ಆವರಣದ ಹೊರಗಡೆ ಅವರನ್ನು ಬಂಧಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದಮನ ಮಾಡುವ ನಾಚಿಕೆಗೇಡಿನ ಕೆಲಸ ಸಾಮಾನ್ಯ ಜನರ ದೂರುಗಳ ಬಗ್ಗೆ ತಾತ್ಸಾರ ತೋರುವ ಪೊಲೀಸರು, ಈ ಪ್ರಕರಣದಲ್ಲಿ ಹಗರಣದ ವಾಸ್ತವವನ್ನು ಮುಚ್ಚಿಹಾಕಲು ಅತೀವ ಆಸಕ್ತಿ ವಹಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಸರ್ಕಾರದ ದುರಾಡಳಿತದ ವಿರುದ್ಧ ದನಿ ಎತ್ತುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ ಎಂಬ ಸಂದೇಶ ರವಾನಿಸಲು ಕಾಂಗ್ರೆಸ್ ಈ ರೀತಿ ಮಾಡುತ್ತಿದೆ. ಆದರೆ, ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆ ಬಲಿಷ್ಠವಾಗಿದ್ದು, ಸರ್ಕಾರದ ಇಂತಹ ದುರ್ಮಾರ್ಗದ ನಡೆಗಳು ಅದಕ್ಕೆ ತಿರುಗುಬಾಣವಾಗಲಿವೆ ಎಂದು ಎಚ್ಚರಿಕೆ ನೀಡಿದ್ದಾರೆ.ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಹಗರಣಗಳನ್ನು ಮುಚ್ಚಿಹಾಕಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ವಿರೋಧ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿಯು ಸರ್ಕಾರದ ಜನವಿರೋಧಿ ಧೋರಣೆಗಳ ವಿರುದ್ಧ ತನ್ನ ಹೋರಾಟವನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳಿಸಲಿದೆ ಎಂದು ಘೋಷಿಸಿದ್ದಾರೆ.


