ರಾಜಕೀಯರಾಜ್ಯಸುದ್ದಿ

ಯತ್ನಾಳ್ ವಿರುದ್ಧ ಕಾಂಗ್ರೆಸ್ ಆಕ್ರೋಶದ ಬಿರುಗಾಳಿ;ಭಾವಚಿತ್ರ ದಹಿಸಿ ಪ್ರತಿಭಟನೆ!

ಬೆಂಗಳೂರು: ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ವಿಚಾರ ಈಗ ರಾಜ್ಯ ರಾಜಕಾರಣದಲ್ಲಿ ಕಿಚ್ಚು ಹಚ್ಚಿದೆ.

ಯತ್ನಾಳ್ ಅವರ ಈ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದು, ಯತ್ನಾಳ್ ಅವರನ್ನು ಕೂಡಲೇ ಬಂಧಿಸಿ ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿದ್ದಾರೆ.ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಬಳಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ನೇತೃತ್ವದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ಯತ್ನಾಳ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಯತ್ನಾಳ್ ಅವರ ಭಾವಚಿತ್ರವನ್ನು ದಹಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಯತ್ನಾಳ್ ಪದೇ ಪದೇ ಇಂತಹ ಪ್ರಚೋದನಾಕಾರಿ ಹೇಳಿಕೆಗಳ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಸಂಚು ನಡೆಸುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು. ರಾಷ್ಟ್ರ ನಾಯಕರನ್ನು ಅವಮಾನಿಸುವುದು ಅಕ್ಷಮ್ಯ ಅಪರಾಧವಾಗಿದ್ದು, ಸರ್ಕಾರ ಈ ಕೂಡಲೇ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡರು ಪಟ್ಟು ಹಿಡಿದಿದ್ದಾರೆ.

Comments (0)

Your email address will not be published. Required fields are marked *

Back to top button