ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಉದ್ವಿಗ್ನತೆಯಿಂದಾಗಿ ವಾಯುಮಾರ್ಗದಲ್ಲಿ ನಿರ್ಬಂಧ ಹೇರಲಾಗಿದ್ದು, ಇದರ ನೇರ ಪರಿಣಾಮ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆಯೂ ಉಂಟಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ ಮತ್ತು ಇಂಡಿಗೋ ಸಂಸ್ಥೆಗಳು ದುಬೈ ಸೇರಿದಂತೆ ಗಲ್ಫ್ ರಾಷ್ಟ್ರಗಳಿಗೆ ತೆರಳಬೇಕಿದ್ದ ಹಲವು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿವೆ. ಇದರಿಂದಾಗಿ ವಿದೇಶಕ್ಕೆ ಪ್ರಯಾಣ ಬೆಳೆಸಬೇಕಿದ್ದ ನೂರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿಯೇ ಪರದಾಡುವಂತಾಗಿದ್ದು, ಅನಿಶ್ಚಿತತೆಯ ವಾತಾವರಣ ನಿರ್ಮಾಣವಾಗಿದೆ.
ವಿಮಾನ ನಿಲ್ದಾಣ ಪ್ರಾಧಿಕಾರವು ಪ್ರಯಾಣಿಕರಿಗೆ ಮಹತ್ವದ ಸೂಚನೆಯನ್ನು ನೀಡಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಬರುವ ಮುನ್ನ ತಮ್ಮ ವಿಮಾನ ಸಂಸ್ಥೆಗಳ ಅಧಿಕೃತ ವೆಬ್ಸೈಟ್ ಅಥವಾ ಸಹಾಯವಾಣಿ ಮೂಲಕ ವಿಮಾನದ ಸ್ಥಿತಿಗತಿಯನ್ನು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳುವಂತೆ ಮನವಿ ಮಾಡಿದೆ. ಇರಾನ್ ವಾಯುಮಾರ್ಗವನ್ನು ಬಳಸದಂತೆ ಸೂಚನೆ ಇರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಿಮಾನಯಾನ ಸಂಸ್ಥೆಗಳು ಸ್ಪಷ್ಟಪಡಿಸಿವೆ.


