ಮಹಾರಾಷ್ಟ್ರ: ನಾಗ್ಪುರ ಜಿಲ್ಲೆಯ ಕಲ್ಮೇಶ್ವರ ತಾಲೂಕಿನ ರೌಲ್ಗಾಂವ್ ಬಳಿ ಮುಂಜಾನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ 15 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಸ್ಫೋಟಕಗಳನ್ನು ತಯಾರಿಸುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಈ ದುರಂತ ಸಂಭವಿಸಿದ್ದು ಮೃತರ ಪೈಕಿ ಹಲವರು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಮುಂಜಾನೆ 6 ಗಂಟೆಯ ಶಿಫ್ಟ್ಗೆ ಕೆಲಸಕ್ಕೆ ಹಾಜರಾಗಿದ್ದ ಸುಮಾರು 35 ಕಾರ್ಮಿಕರ ಮೇಲೆ ವಿಧಿ ಅಟ್ಟಹಾಸ ಮೆರೆದಿದ್ದು ಇಡೀ ಪ್ರದೇಶ ಸ್ಮಶಾನವಾಗಿ ಮಾರ್ಪಟ್ಟಿದೆ.
ಭೀಕರ ಅವಘಡದಲ್ಲಿ 18 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಕಟ್ಟಡದ ಬಹುತೇಕ ಭಾಗ ನೆಲಸಮವಾಗಿದ್ದು ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ಮುಂದುವರಿದಿದೆ. ಸ್ಥಳೀಯ ಆಡಳಿತ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟಿದ್ದು ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ.
ಈ ಹೃದಯವಿದ್ರಾವಕ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ಘೋಷಿಸಲಾಗಿದೆ. ಕಾರ್ಖಾನೆಯಲ್ಲಿ ಸುರಕ್ಷತಾ ಕ್ರಮಗಳ ಲೋಪವಾಗಿದೆಯೇ ಎಂಬ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸುವ ಸಾಧ್ಯತೆ ಇದೆ.


