
ಯಾದಗಿರಿ: ಶಹಾಪುರ ತಾಲೂಕಿನಲ್ಲಿ ಸಂಚಲನ ಮೂಡಿಸಿದ್ದ ಬಾಲಕಿ ಮೇಲಿನ ಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ್ ಮುತ್ಯಾನಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಪೋಕ್ಸೋ ಕಾಯಿದೆಯಡಿ ದಾಖಲಾದ ಗಂಭೀರ ಪ್ರಕರಣದಲ್ಲಿ ಮುತ್ಯಾನನ್ನು ಈಗ ಜೈಲಿಗಟ್ಟಲಾಗಿದೆ.
ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ಎದುರಿಸುತ್ತಿದ್ದ ಮಲ್ಲಿಕಾರ್ಜುನ್ ಮುತ್ಯಾ, ಪೊಲೀಸರ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದನು. ಆದರೆ, ನಿನ್ನೆ ತಡರಾತ್ರಿ ಶಹಾಪುರದ ಗೋಗಿ ಪೊಲೀಸರ ಮುಂದೆ ಆತ ಸ್ವತಃ ಶರಣಾಗಿದ್ದನು. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಸುದೀರ್ಘ ವಿಚಾರಣೆ ನಡೆಸಿದ ನಂತರ, ಶಹಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದರು.
ವೈದ್ಯಕೀಯ ವರದಿ ಪಡೆದ ನಂತರ ಪೊಲೀಸರು ಮುತ್ಯಾನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಧೀಶರು, ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಸದ್ಯಕ್ಕೆ ಮುತ್ಯಾನನ್ನು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗುತ್ತಿದೆ.
ದೇವಮಾನವನ ಮುಖವಾಡದ ಹಿಂದೆ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಆರೋಪ ಕೇಳಿಬರುತ್ತಿದ್ದಂತೆಯೇ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈಗ ನ್ಯಾಯಾಂಗ ಬಂಧನ ವಿಧಿಸಿರುವುದು ಸಂತ್ರಸ್ತ ಕುಟುಂಬಕ್ಕೆ ಸಮಾಧಾನ ತಂದಿದೆ. ಪೊಲೀಸರು ಈ ಪ್ರಕರಣದಲ್ಲಿ ಹೆಚ್ಚಿನ ಸಾಕ್ಷ್ಯಾಧಾರಗಳನ್ನು ಕಲೆಹಾಕುತ್ತಿದ್ದು, ತನಿಖೆ ಮುಂದುವರಿದಿದೆ.




