
ವಿಧಾನಸೌಧದಲ್ಲಿಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಉದ್ಯೋಗ ಸೃಷ್ಟಿಯ ವಿಚಾರದಲ್ಲಿ ಸರ್ಕಾರ ವಿದ್ಯಾವಂತ ಯುವಕರಿಗೆ ಮತ್ತು ದಲಿತರಿಗೆ ದೋಖಾ ಮಾಡುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ರಾಜ್ಯದಲ್ಲಿ ಸದ್ಯ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಮನಸ್ಸಿಲ್ಲ. ಬಿಜೆಪಿ ಈ ಬಗ್ಗೆ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ, ಸಿಎಂ ಸಿದ್ದರಾಮಯ್ಯ ಸದನಕ್ಕೆ ತಪ್ಪು ಮಾಹಿತಿ ನೀಡುವ ಮೂಲಕ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಗುಡುಗಿದ್ದಾರೆ.
ಸರ್ಕಾರದ ಅಂಕಿಅಂಶಗಳನ್ನೇ ಮುಂದಿಟ್ಟುಕೊಂಡು ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಗಳನ್ನು ಈ ಸರ್ಕಾರ ತನ್ನ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದೆ ಎಂದು ಟೀಕಿಸಿದರು. ಕಳೆದ ಬೆಳಗಾವಿ ಅಧಿವೇಶನದಲ್ಲಿ 30 ರಿಂದ 36 ಸಾವಿರ ಹುದ್ದೆ ತುಂಬಿದ್ದೇವೆ ಎಂದು ಸರ್ಕಾರ ಹೇಳಿತ್ತು, ಆದರೆ ವಾಸ್ತವದಲ್ಲಿ ಈ ಅವಧಿಯಲ್ಲಿ ಹೊಸದಾಗಿ ಒಂದೇ ಒಂದು ಹುದ್ದೆಯನ್ನು ತುಂಬಿಲ್ಲ. ಕೆಪಿಎಸ್‌ಸಿ ಮತ್ತು ಕೆಇಎ ಮೂಲಕ ಹಿಂದೆ ನಡೆದಿದ್ದ ನೋಟಿಫಿಕೇಶನ್‌ಗಳನ್ನೇ ತಮ್ಮ ಖಾತೆಗೆ ಸೇರಿಸಿಕೊಳ್ಳುವ ಮೂಲಕ ಸರ್ಕಾರ ಕ್ರೆಡಿಟ್ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ನೇಮಕಾತಿ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ ರಾಜ್ಯದ ಯುವಕರು ಸಂಕಷ್ಟದಲ್ಲಿದ್ದು, ಬಿಜೆಪಿ ಯುವಕರ ಪರವಾಗಿ ನಿಲ್ಲಲಿದೆ ಎಂದು ಅವರು ಸ್ಪಷ್ಟಪಡಿಸಿದರು. 2023 ರಿಂದ 2025ರವರೆಗೆ ಕೇವಲ 3,081 ಹುದ್ದೆಗಳ ಆಯ್ಕೆ ಪ್ರಕ್ರಿಯೆ ನಡೆದಿರುವ ಬಗ್ಗೆ ಸರ್ಕಾರವೇ ಒಪ್ಪಿಕೊಂಡಿದೆ, ಇದು ಯುವ ಸಮೂಹಕ್ಕೆ ಮಾಡಿದ ಅನ್ಯಾಯವಾಗಿದೆ. ಈ ಕೂಡಲೇ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡದಿದ್ದರೆ ಸರ್ಕಾರದ ಕಿವಿ ಹಿಂಡುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.




