ಜಿಲ್ಲೆಸುದ್ದಿ

ಬಸವನ ಬಾಗೇವಾಡಿ ಬಳಿ ಕಾರು ಪಲ್ಟಿ:; ಬೆಳಗಾವಿ ಮೂಲದ ಇಬ್ಬರು ಸ್ಥಳದಲ್ಲೇ ಸಾವು!

ವಿಜಯಪುರ: ಬಸವನ ಬಾಗೇವಾಡಿ – ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ (70) ಹಾಗೂ ಕಾಮಪ್ಪ ಅವರಾದಿ (65) ಮೃತಪಟ್ಟ ದುರ್ದೈವಿಗಳು. ಕಾಗವಾಡದಿಂದ ಆಂಧ್ರಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ಜ್ಯೋತಿರ್ಲಿಂಗ ದರ್ಶನಕ್ಕೆಂದು ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಸ್ವಿಫ್ಟ್‌ ಡಿಜೈರ್ ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿಯಲ್ಲಿ ಪಲ್ಟಿಯಾದ ವೇಗಕ್ಕೆ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಉಳಿದ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶ್ರೀಶೈಲಕ್ಕೆ ಪುಣ್ಯಕ್ಷೇತ್ರದ ದರ್ಶನಕ್ಕೆ ಹೊರಟಿದ್ದ ಭಕ್ತರು ಅರ್ಧದಾರಿಯಲ್ಲೇ ಸಾವನ್ನಪ್ಪಿರುವುದು ಕಾಗವಾಡ ಪಟ್ಟಣದಲ್ಲಿ ಶೋಕದ ಛಾಯೆ ಮೂಡಿಸಿದೆ. ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Comments (0)

Your email address will not be published. Required fields are marked *

Back to top button