
ಬೆಂಗಳೂರು: ಗ್ಯಾಸ್ ಸಿಲಿಂಡರ್‌ಗಳ ಕೊರತೆಯಿಂದಾಗಿ ಬೆಂಗಳೂರಿನ ಹೋಟೆಲ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನಗರದಲ್ಲಿ ಗ್ಯಾಸ್ ಎಮರ್ಜೆನ್ಸಿ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಲವಾರು ಹೋಟೆಲ್‌ಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ. ಕೆಲ ಹೋಟೆಲ್‌ಗಳು ಮಾತ್ರ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ತಮ್ಮ ಸೇವೆ ಮುಂದುವರಿಸುತ್ತಿವೆ.

ಗ್ಯಾಸ್ ಸರಬರಾಜಿನ ವ್ಯತ್ಯಯದಿಂದಾಗಿ ಹೋಟೆಲ್ ಉದ್ಯಮಕ್ಕೆ ಈಗಾಗಲೇ ಸುಮಾರು 100 ಕೋಟಿ ರೂಪಾಯಿಗೂ ಅಧಿಕ ನಷ್ಟ ಉಂಟಾಗಿದೆ ಎಂದು ಹೋಟೆಲ್ ಮಾಲೀಕರು ತಿಳಿಸಿದ್ದಾರೆ. ಗ್ಯಾಸ್ ಕೊರತೆಯನ್ನು ದುರುಪಯೋಗಪಡಿಸಿಕೊಂಡು ಕೆಲವರು ಕಾಳಸಂತೆಯಲ್ಲಿ ಸಿಲಿಂಡರ್‌ಗಳನ್ನು ದುಪ್ಪಟ್ಟು ದರಕ್ಕೆ ಮಾರಾಟ ಮಾಡುತ್ತಿರುವ ಆರೋಪಗಳೂ ಕೇಳಿಬರುತ್ತಿವೆ. ಆದರೆ ಇದುವರೆಗೆ ಸಂಬಂಧಿತ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿಲ್ಲ ಎಂಬ ಅಸಮಾಧಾನ ಹೋಟೆಲ್ ಉದ್ಯಮದವರಲ್ಲಿ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಕಮರ್ಷಿಯಲ್ ಬಳಕೆಗೆ ಕನಿಷ್ಠ 20 ಶೇಕಡಾ ಗ್ಯಾಸ್ ವಿತರಣೆ ಮಾಡಬೇಕೆಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಅದರಂತೆ ರಾಜ್ಯ ಸರ್ಕಾರವೂ ಗ್ಯಾಸ್ ಏಜೆನ್ಸಿಗಳಿಗೆ 20 ಶೇಕಡಾ ಗ್ಯಾಸ್ ವಿತರಣೆ ಮಾಡಲು ನಿರ್ದೇಶನ ನೀಡಿದೆ.
ಇದೀಗ ಗ್ಯಾಸ್ ಸರಬರಾಜು ಕಂಪನಿಗಳ ಜೊತೆ ಸರ್ಕಾರದ ಪ್ರಮುಖ ಸಭೆ ನಡೆಯಲಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ಗ್ಯಾಸ್ ವಿತರಣೆಯ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.




