ರಾಜ್ಯಶಿಕ್ಷಣಸುದ್ದಿ

ಪರೀಕ್ಷೆ ಸಮಯದಲ್ಲೇ ಪವರ್ ಕಟ್ ಸಮಸ್ಯೆ: ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮಕ್ಕೆ ಬೆಸ್ಕಾಂ ಸೂಚನೆ

ಬೆಂಗಳೂರು: ಮಾರ್ಚ್ ತಿಂಗಳು ಆರಂಭವಾದರೆ ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಒತ್ತಡ ಹೆಚ್ಚಾಗುವ ಸಮಯ. ಇದೇ ವೇಳೆ ಬೇಸಿಗೆ ಆರಂಭವಾಗುತ್ತಿದ್ದಂತೆ ಹಲವು ಪ್ರದೇಶಗಳಲ್ಲಿ ಪವರ್ ಕಟ್ ಸಮಸ್ಯೆಯೂ ತಲೆದೋರುತ್ತಿದೆ. ರಾಜಧಾನಿ ಬೆಂಗಳೂರಿನ ಹಲವಾರು ಭಾಗಗಳಲ್ಲಿ ಈಗಾಗಲೇ ದಿನಕ್ಕೆ 1ರಿಂದ 2 ಗಂಟೆಗಳ ಕಾಲ ವಿದ್ಯುತ್ ಕಡಿತವಾಗುತ್ತಿರುವುದರಿಂದ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ಪರೀಕ್ಷಾ ಸಮಯದಲ್ಲೇ ವಿದ್ಯುತ್ ಕಡಿತವಾಗುತ್ತಿರುವುದು ವಿದ್ಯಾರ್ಥಿಗಳಿಗೆ ದೊಡ್ಡ ತೊಂದರೆಯಾಗಿ ಪರಿಣಮಿಸಿದೆ. ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇದು ಸಂಕಷ್ಟ ತಂದೊಡ್ಡುತ್ತಿದೆ ಎಂಬ ಆಕ್ರೋಶ ಕೇಳಿಬರುತ್ತಿದೆ.

ಈ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜು ಮಾಡುವ ಸಂಸ್ಥೆಯಾದ ಬೆಸ್ಕಾಂ ಎಚ್ಚೆತ್ತುಕೊಂಡಿದ್ದು, ಪರೀಕ್ಷಾ ಅವಧಿಯಲ್ಲಿ ವಿದ್ಯುತ್ ಕಡಿತವಾಗದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ಅವರು ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ.

ರಾಜ್ಯದಲ್ಲಿ ಬೇಸಿಗೆ ಆರಂಭವಾದಂತೆ ವಿದ್ಯುತ್ ಬೇಡಿಕೆ ಹೆಚ್ಚಾಗುತ್ತಿರುವುದರಿಂದ ಕೆಲವೊಮ್ಮೆ ಪವರ್ ಕಟ್ ಸಮಸ್ಯೆ ಎದುರಾಗುತ್ತಿದೆ. ಆದರೆ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು.

ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಿದ್ಯುತ್ ಕಡಿತ ಮಾಡದಂತೆ ಕ್ರಮ ವಹಿಸುವಂತೆ ತಿಳಿಸಲಾಗಿದೆ. ಅನವಶ್ಯಕವಾಗಿ ಪವರ್ ಕಟ್ ಮಾಡಬಾರದು. ಮಾರ್ಚ್ 17ರಿಂದ ಏಪ್ರಿಲ್ 2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಈ ಅವಧಿಯಲ್ಲಿ ಯಾವುದೇ ರೀತಿಯ ವಿದ್ಯುತ್ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಅಧ್ಯಯನಕ್ಕೆ ಅಡಚಣೆ ಆಗದಂತೆ ವಿದ್ಯುತ್ ಪೂರೈಕೆಯನ್ನು ಸುಗಮಗೊಳಿಸಲು ಬೆಸ್ಕಾಂ ಮುಂದಾಗಿದೆ.

Comments (0)

Your email address will not be published. Required fields are marked *

Back to top button