ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿ ದುರಂತ; ನೀರಾನೆ ದಾಳಿಗೆ ಯುವ ಪಶುವೈದ್ಯೆ ಬಲಿ!

ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (27) ನೀರಾನೆ ದಾಳಿಗೆ ದಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಇವರು ಇತ್ತೀಚೆಗಷ್ಟೇ ಗುತ್ತಿಗೆ ಆಧಾರದ ಮೇಲೆ ಪಶುವೈದ್ಯೆಯಾಗಿ ನೇಮಕಗೊಂಡು ತರಬೇತಿ ಪಡೆಯುತ್ತಿದ್ದರು.
ಗುರುವಾರ ತಡರಾತ್ರಿ ಮೃಗಾಲಯದ ಆಸ್ಪತ್ರೆಯಲ್ಲಿ ಸನ್ ಕಾನರ್ ಹಕ್ಕಿಗೆ ಚಿಕಿತ್ಸೆ ನೀಡಲು ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಅಲ್ಲಿನ ಗರ್ಭಿಣಿ ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಡಾ. ಸಮೀಕ್ಷಾ ಅದರ ಆವರಣದ ಒಳಗೆ ಹೋದಾಗ, ನೀರಾನೆ ಏಕಾಏಕಿ ಅವರ ಮೇಲೆ ಭೀಕರವಾಗಿ ದಾಳಿ ನಡೆಸಿದೆ.ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ವೈದ್ಯೆಯನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಈ ದುರಂತಕ್ಕೆ ತೀವ್ರ ಸಂತಾಪ ಸೂಚಿಸಿದ್ದು, ಮೃತ ವೈದ್ಯೆಯ ಕುಟುಂಬಕ್ಕೆ ನಿಯಮಾನುಸಾರ ತಕ್ಷಣ ಪರಿಹಾರ ನೀಡುವಂತೆ ಸೂಚಿಸಿದ್ದಾರೆ. ಅಲ್ಲದೆ, ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳ ತಂಡದಿಂದ ತನಿಖೆ ನಡೆಸಿ 7 ದಿನಗಳೊಳಗೆ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ. ಮೃಗಾಲಯಗಳಲ್ಲಿ ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವಾಗ ಕಟ್ಟುನಿಟ್ಟಾಗಿ ಸುರಕ್ಷತಾ ಮಾನದಂಡಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.