mangaloreಜಿಲ್ಲೆ

ಇನ್ಸ್‌ಪೆಕ್ಟರ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳೆಂದ ಪೊಲೀಸ್ ಕಮಿಷನರ್!

ಮಂಗಳೂರು: ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದ ಗಂಭೀರ ಆರೋಪಗಳು ಇದೀಗ ಹೊಸ ತಿರುವು ಪಡೆದುಕೊಂಡಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಶಿಕ್ಷಕಿಯೊಬ್ಬರಿಗೆ ಜೀವಬೆದರಿಕೆ ಹಾಕಿರುವ ಬಗ್ಗೆ ಬೆಳ್ತಂಗಡಿಯ ವೇಣೂರು ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ. 2018 ರಿಂದ 2023ರ ಅವಧಿಯಲ್ಲಿ ಇನ್ಸ್‌ಪೆಕ್ಟರ್ ಸಂದೇಶ್ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಸುಮಾರು 16 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದಾರೆ ಎಂದು ಶಿಕ್ಷಕಿ ಗಂಭೀರವಾಗಿ ಆರೋಪಿಸಿದ್ದಾರೆ. ಅಲ್ಲದೆ, ಇತ್ತೀಚೆಗೆ ಇಬ್ಬರು ಮಹಿಳೆಯರ ಮೂಲಕ ತಮಗೆ ಸಂದೇಶ ಕಳುಹಿಸಿ, ಈ ವಿಷಯದ ಬಗ್ಗೆ ಬಾಯಿ ಬಿಟ್ಟರೆ ಜೀವಂತವಾಗಿ ಬಿಡುವುದಿಲ್ಲ ಎಂದು ಬೆದರಿಕೆ ಹಾಕಲಾಗಿದೆ ಎಂದು ಅವರು ದೂರಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ. ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಎಂಬುವವರು ಮಾಡಿದ್ದ ಲೈಂಗಿಕ ಕಿರುಕುಳ ಮತ್ತು ಹಲ್ಲೆಯ ಆರೋಪಗಳು ಪ್ರಾಥಮಿಕ ತನಿಖೆಯಲ್ಲಿ ಸುಳ್ಳು ಎಂದು ಸಾಬೀತಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ. ಮಂಗಳೂರು ಉತ್ತರ ವಿಭಾಗದ ಎಸಿಪಿ ಶ್ರೀಕಾಂತ್ ಅವರು ನಡೆಸಿದ ತನಿಖಾ ವರದಿಯ ಆಧಾರದ ಮೇಲೆ, ಈ ಮಹಿಳೆಯರು ಯಾರೋ ಪ್ರಚೋದನೆಗೆ ಒಳಗಾಗಿ ಈ ರೀತಿಯ ಪ್ರೇರಿತ ದೂರು ನೀಡಿದ್ದಾರೆ ಎಂಬುದು ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.

ಆದರೆ, ಈ ಪ್ರಕರಣದಲ್ಲಿ ವೈರಲ್ ಆಗಿರುವ ಆಡಿಯೋ ಮತ್ತು ವಿಡಿಯೋಗಳ ಸತ್ಯಾಸತ್ಯತೆಯ ಬಗ್ಗೆ ಮತ್ತಷ್ಟು ಚರ್ಚೆಗಳು ಶುರುವಾಗಿವೆ. ವೈರಲ್ ಆಗಿರುವ ಆಡಿಯೋದಲ್ಲಿ ಇನ್ಸ್‌ಪೆಕ್ಟರ್ ಅವರ ಅಸಭ್ಯ ವರ್ತನೆ ಎದ್ದು ಕಾಣುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆಡಿಯೋದಲ್ಲಿರುವ ಧ್ವನಿ ತಮ್ಮದೇ ಎಂದು ಮಹಿಳೆಯರು ಒಪ್ಪಿಕೊಂಡಿದ್ದರೂ, ದೂರು ನೀಡಲು ಇಷ್ಟವಿಲ್ಲ ಎಂದು ಹೇಳಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ನಡುವೆ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ಈಗಾಗಲೇ ಅಮಾನತುಗೊಳಿಸಿ ತನಿಖೆ ಮುಂದುವರಿಸಲಾಗಿದೆ.

ಪೊಲೀಸ್ ಕಮಿಷನರ್ ಅವರ ತನಿಖಾ ವರದಿಯನ್ನು ತೀವ್ರವಾಗಿ ವಿರೋಧಿಸಿರುವ ದೂರುದಾರೆ ಸುಮತಿ ನಾಯಕ್, ತನಿಖಾಧಿಕಾರಿಯಾದ ಎಸಿಪಿ ಶ್ರೀಕಾಂತ್ ಅವರೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. “ಇನ್ಸ್‌ಪೆಕ್ಟರ್ ಸಂದೇಶ್, ಎಸಿಪಿ ಶ್ರೀಕಾಂತ್ ಮತ್ತು ಕಮಿಷನರ್ ಅವರ ನಡುವೆ ಚೈನ್ ಲಿಂಕ್ ಇದೆ, ಹೀಗಾಗಿ ಅವರಿಂದ ನ್ಯಾಯ ನಿರೀಕ್ಷಿಸಲು ಸಾಧ್ಯವಿಲ್ಲ” ಎಂದು ಅವರು ಗುಡುಗಿದ್ದಾರೆ. ಈ ಪ್ರಕರಣದ ಸತ್ಯಾಂಶ ಹೊರಬರಬೇಕಾದರೆ ಬೆಂಗಳೂರಿನ ಉನ್ನತ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಬೇಕು ಮತ್ತು ಎಸಿಪಿ ಶ್ರೀಕಾಂತ್ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Comments (0)

Your email address will not be published. Required fields are marked *

Back to top button