
ಬೆಂಗಳೂರು: ಐಪಿಎಲ್ 2026 ಸೀಸನ್ ಆರಂಭದ ಹಿನ್ನಲೆಯಲ್ಲಿ ಆರ್ಸಿಬಿ ಆಡಳಿತ ಮಂಡಳಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ತಂಡದ ಉಪಾಧ್ಯಕ್ಷ ರಾಜೇಶ್ ಮೆನನ್ ಹಾಗೂ ಕ್ರಿಕೆಟ್ ಡೈರೆಕ್ಟರ್ ಮೋ ಬೋಬಾಟ್ ಹಲವು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೇಶ್ ಮೆನನ್, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಸೇರಿದಂತೆ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದರು. ಸರ್ಕಾರ ನೀಡಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ.
ಈ ಬಾರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಗ್ರೌಂಡ್ ಒಳಗೆ ಮತ್ತು ಹೊರಗೆ ಸಿಸಿಟಿವಿ ಕ್ಯಾಮರಾಗಳ ಜೊತೆಗೆ ಎಐ ಆಧಾರಿತ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಜನಸಂದಣಿ ಹೆಚ್ಚಾದ ಸ್ಥಳಗಳನ್ನು ಗುರುತಿಸಿ ತಕ್ಷಣ ಎಚ್ಚರಿಕೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಮೂರು ಕಮಾಂಡ್ ಸೆಂಟರ್ಗಳನ್ನು ಸ್ಥಾಪಿಸಲಾಗಿದ್ದು, ಎರಡು ಕ್ರೀಡಾಂಗಣದಲ್ಲಿ ಮತ್ತು ಒಂದು ಕಮಿಷನರ್ ಕಚೇರಿಯಲ್ಲಿ ಕಾರ್ಯನಿರ್ವಹಿಸಲಿದೆ.
ಇಂದು ಸಂಜೆ 4 ಗಂಟೆಯಿಂದ ಟಿಕೆಟ್ ಮಾರಾಟ ಆರಂಭವಾಗಲಿದೆ. ಮೆಟ್ರೋ ಟಿಕೆಟ್ ಲಿಂಕ್ ಮಾಡುವ ವ್ಯವಸ್ಥೆ ಜಾರಿಗೆ ತರುವ ಹಿನ್ನೆಲೆಯಲ್ಲಿ ಟಿಕೆಟ್ ಮಾರಾಟ ಸ್ವಲ್ಪ ತಡವಾಗಿದೆ. ಟಿಕೆಟ್ ಜೊತೆ ಪಾರ್ಕಿಂಗ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯೂ ಇದೆ. ಪಂದ್ಯ ಆರಂಭಕ್ಕೆ ನಾಲ್ಕು ಗಂಟೆಗಳ ಮುಂಚೆಯೇ ಪ್ರೇಕ್ಷಕರಿಗೆ ಪ್ರವೇಶ ನೀಡಲಾಗುತ್ತದೆ. ಕ್ರೀಡಾಂಗಣದ ಸುತ್ತಮುತ್ತ ಕಾರುಗಳಿಗೆ ಎಂಟ್ರಿ ಇರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷದ ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟ 11 ಅಭಿಮಾನಿಗಳ ಸ್ಮರಣಾರ್ಥ, ಆಟಗಾರರು 11 ನಂಬರ್ ಜರ್ಸಿಯಲ್ಲಿ ಅಭ್ಯಾಸ ನಡೆಸಲಿದ್ದಾರೆ. ಜೊತೆಗೆ ಕ್ರೀಡಾಂಗಣದಲ್ಲಿ 11 ಸೀಟ್ಗಳನ್ನು ಖಾಲಿ ಬಿಡುವ ಮೂಲಕ ಗೌರವ ಸಲ್ಲಿಸಲಾಗುತ್ತದೆ.




