ಬಾಗಲಕೋಟೆ ಉಪಚುನಾವಣೆ: ಯತ್ನಾಳ್ ಪ್ರಚಾರಕ್ಕೆ ಬಿ.ಎಸ್.ವೈ ಗ್ರೀನ್ ಸಿಗ್ನಲ್!

ಬೆಂಗಳೂರು: ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ನಡೆಸಲು ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಸಿರು ನಿಶಾನೆ ತೋರಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಯಾರೇ ಬಂದರೂ ಸ್ವಾಗತಿಸುವುದಾಗಿ ತಿಳಿಸುವ ಮೂಲಕ ಯತ್ನಾಳ್ ಅವರ ಎಂಟ್ರಿಯನ್ನು ಖಚಿತಪಡಿಸಿದ್ದಾರೆ. ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಮುಖ್ಯಮಂತ್ರಿಗಳೇ ನಾಲ್ಕೈದು ದಿನ ಪ್ರಚಾರದಲ್ಲಿ ತೊಡಗಿರುವುದು ಅವರಿಗೆ ಎದುರಾಗಿರುವ ಸೋಲಿನ ಭಯವನ್ನು ಎತ್ತಿ ತೋರಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಹಿತ ಮರೆತು ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಕಿಡಿಕಾರಿದ ಯಡಿಯೂರಪ್ಪ, ಈ ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಮತ್ತೆ ಗೆದ್ದರೆ ಅಧಿಕಾರ ಮದದಿಂದ ಭ್ರಷ್ಟಾಚಾರ ಮತ್ತಷ್ಟು ಹೆಚ್ಚಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.




