
ಹುಬ್ಬಳ್ಳಿ: ಭಾರತೀಯ ರೈಲ್ವೆ ಹಾಗೂ ನೈಋತ್ಯ ರೈಲ್ವೆ ಇಲಾಖೆಯ ನೇಮಕಾತಿಯಲ್ಲಿ ಕನ್ನಡಿಗರಿಗೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಇಂದು ಹುಬ್ಬಳ್ಳಿಯಲ್ಲಿ ಕನ್ನಡ ಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು.ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂರಾರು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರಹಾಕಿದರು.

ರೈಲ್ವೆ ಕಚೇರಿಗೆ ಮುತ್ತಿಗೆ -ಪ್ರತಿಭಟನಾ ಮೆರವಣಿಗೆ
ಹುಬ್ಬಳ್ಳಿಯ ನೈಋತ್ಯ ರೈಲ್ವೆಯ ಪ್ರವೇಶ ದ್ವಾರದಿಂದ ರೈಲ್ವೆ ಮುಖ್ಯ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಮಾಡಲಾಯಿತು. ಈ ವೇಳೆ ಕರವೇ ಕಾರ್ಯಕರ್ತರು ರೈಲ್ವೆ ಇಲಾಖೆಯ ನಿರ್ಲಕ್ಷ್ಯದ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು. ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗದಂತೆ ವ್ಯವಸ್ಥಿತವಾಗಿ ಸಂಚು ರೂಪಿಸಲಾಗುತ್ತಿದೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.
ರೈಲ್ವೆ ನೇಮಕಾತಿಯಲ್ಲಿ ಕನ್ನಡಿಗರಿಗೆ ‘ದೊಡ್ಡ ಅನ್ಯಾಯ’
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪ್ರವೀಣ್ ಶೆಟ್ಟಿ ಅವರು, “ರೈಲ್ವೆ ಪರೀಕ್ಷೆ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ಈಗಾಗಲೇ ಹಲವಾರು ಬಾರಿ ಇದರ ಬಗ್ಗೆ ಹೋರಾಟ ನಡೆಸಿದರೂ ಸಹ ರೈಲ್ವೆ ಇಲಾಖೆ ಮಾತ್ರ ಬುದ್ಧಿ ಕಲಿಯುತ್ತಿಲ್ಲ.ಸ್ಥಳೀಯರಿಗೆ ಉದ್ಯೋಗ ನೀಡುವಲ್ಲಿ ರೈಲ್ವೆ ಇಲಾಖೆ ಮಲತಾಯಿ ಧೋರಣೆ ಅನುಸರಿಸುತ್ತಿದೆ,” ಎಂದು ಗುಡುಗಿದರು.
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಡೆಸಬೇಕು.ನೈಋತ್ಯ ರೈಲ್ವೆಯ ಉದ್ಯೋಗಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು.ನೇಮಕಾತಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ಅಕ್ರಮಗಳನ್ನು ತಡೆದು ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಪ್ರವೀಣ್ ಶೆಟ್ಟಿ ಕರವೇ ಬಣ ಆಗ್ರಹಿಸಿತು. ಒಂದು ವೇಳೆ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸದಿದ್ದರೆ, ಹೋರಾಟವನ್ನು ಕೇವಲ ಹುಬ್ಬಳ್ಳಿಗೆ ಸೀಮಿತಗೊಳಿಸದೆ ರಾಜ್ಯವ್ಯಾಪಿ ನಡೆಸಲಾಗುವುದು ಎಂದು ಕರವೇ ಸಂಘಟನೆ ರೈಲ್ವೆ ಇಲಾಖೆಗೆ ಖಡಕ್ ಎಚ್ಚರಿಕೆ ನೀಡಿದೆ.
#RailwayJobInjustice #KannadigasFirst #KraveProtest #PraveenShetty #Hubballi #SouthWesternRailway #KannadaPride #KarnatakaNews #FreedomTV #RailwayRecruitment #JusticeForKannadigas




