
ಮಂಗಳೂರು : ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ನಗರದ ನಾಗುರಿ ಎಂಬಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಧಾರಾಕಾರ ಮಳೆಗೆ ನಾಗುರಿಯ ಗುಡ್ಡವೊಂದು ಕುಸಿದು ಕೆಳಗಿದ್ದ ಮನೆಯ ಮೇಲೆ ಬಿದ್ದಿದೆ. ಈ ವೇಳೆ ಮನೆಯಲ್ಲಿದ್ದ ಆರು ಮಂದಿ ಮಣ್ಣಿನ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ತಕ್ಷಣವೇ ಕಾರ್ಯಾಚರಣೆಗೆ ಇಳಿದಿದ್ದಾರೆ. ಮಣ್ಣಿನಡಿ ಸಿಲುಕಿದ್ದವರ ಪೈಕಿ ಓರ್ವ ಪುರುಷ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು, ಸದ್ಯ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದುರದೃಷ್ಟವಶಾತ್ ಘಟನೆಯಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸ್ಥಳದಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತರ ದೇಹಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದೆ.
ಭೂಕುಸಿತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ.




